
ಕೋಲಾರ, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್ ೩೦ ರವರೆಗೆ ಮಾದರಿ ನೀತಿಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಚುನಾವಣೆಗೆ ಸಂಬ0ಧಿಸಿದ0ತೆ ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ ೨೩ ರಂದು ಮತದಾನ ಹಾಗೂ ಅಕ್ಟೋಬರ್ ೨೭ ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು ೩೧,೩೩೬ ನೋಂದಾಯಿತ ಮತದಾರರಿದ್ದು, ಅಧಿಸೂಚನೆ ಪ್ರಕಟವಾದ ಬಳಿಕ ಹೆಚ್ಚುವರಿಯಾಗಿ ೧೬೧ ಜನರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಮತದಾನಕ್ಕಾಗಿ ಜಿಲ್ಲೆಯ ಆರು ತಾಲೂಕುಗಳಲ್ಲಿ ೨೭ ಮುಖ್ಯ ಹಾಗೂ ೧೬ ಸಹಾಯಕ ಮತಗಟ್ಟೆಗಳು ಸೇರಿದಂತೆ ಒಟ್ಟು ೪೩ ಮತಗಟ್ಟೆಗಳನ್ನು ಸ್ಥಾಪಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಚುನಾವಣಾ ಅಕ್ರಮಗಳನ್ನು ತಡೆಯಲು ೧೮ ಫ್ಲೈಯಿಂಗ್ ಸ್ಕ್ವಾಡ್, ೬ ವಿಡಿಯೋ ಸರ್ವೇಲೆನ್ಸ್ ತಂಡಗಳು ಹಾಗೂ ನಗದು ಜಪ್ತಿ ಕಾರ್ಯಾಚರಣೆಗಾಗಿ ೨ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ, ಚುನಾವಣಾ ಪ್ರಚಾರದ ಮೇಲೆ ನಿಗಾ ಇಡಲು ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದರು.
ನೀತಿಸಂಹಿತೆ ಜಾರಿಯಲ್ಲಿರುವ ಕಾರಣ, ಸರ್ಕಾರಿ ವಾಹನಗಳನ್ನು ಚುನಾವಣಾ ಪ್ರಚಾರ ಕಾರ್ಯಗಳಿಗೆ ಬಳಸುವಂತಿಲ್ಲ ಮತ್ತು ಸರ್ಕಾರಿ ಅತಿಥಿಗೃಹಗಳಲ್ಲಿ ಯಾವುದೇ ರಾಜಕೀಯ ಸಭೆಗಳನ್ನು ಆಯೋಜಿಸುವಂತಿಲ್ಲ. ಹೊಸ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ನಿರ್ಬಂಧ ವಿಧಿಸಲಾಗಿದೆ. ರಾಜಕೀಯ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಪ್ರಚಾರ ಸಭೆಗಳನ್ನು ನಡೆಸಲು ಹಾಗೂ ಧ್ವನಿವರ್ಧಕಗಳನ್ನು ಬಳಸಲು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಇದೇ ವೇಳೆ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ವಿವರಿಸಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ೬ ಗ್ರಾಮಗಳಲ್ಲಿ ನೀರಿನ ಸಮಸ್ಯ ಇದ್ದು. ೨ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ೪ ಗ್ರಾಮಗಳಿಗೆ ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಜಾನುವಾರುಗಳಿಗೆ ೨೮ ವಾರಗಳಿಗೆ ಆಗುವಷ್ಟು ಮೇವಿನ ದಾಸ್ತಾನು ಲಭ್ಯವಿದ್ದು, ರೈತರಿಗೆ ೩೬,೦೦೦ ಮೇವಿನ ಕಿಟ್ಗಳನ್ನು ವಿತರಿಸಲಾಗಿದೆ. ಮುಂಬರುವ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ ಎಂದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಅವರು, ಕರಡು ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ೧,೪೨,೧೮೩ ನೋಟಿಸ್ಗಳನ್ನು ಜಾರಿ ಮಾಡಲಾಗಿದ್ದು, ಅಂತಿಮವಾಗಿ ೧,೦೭,೨೮೩ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ಸಾಗುತ್ತಿದೆ. ತಂತ್ರಾಂಶದ ಮೂಲಕ ವಯಸ್ಸಿನ ವ್ಯತ್ಯಾಸ ಹಾಗೂ ದ್ವಿರುಕ್ತಿಗಳನ್ನು (ಡಬಲ್ ಎಂಟ್ರಿ) ಸರಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಎಪಿಎಂಸಿ ಮಾರುಕಟ್ಟೆ ಹಾಗೂ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಜಾಗವನ್ನು ಗುರುತಿಸಲಾಗಿದ್ದು, ಮುಂದಿನ ೧೫-೨೦ ದಿನಗಳ ಒಳಗೆ ಸಚಿವ ಸಂಪುಟದ ಅನುಮೋದನೆ ದೊರೆಯುವ ವಿಶ್ವಾಸವಿದೆ. ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇ ಕಾಮಗಾರಿಯಿಂದಾಗಿ ನರಸಾಪುರ, ಕುರ್ಕಿ ಸೇರಿದಂತೆ ವಿವಿಧೆಡೆ ಉಂಟಾಗಿರುವ ಸರ್ವಿಸ್ ರಸ್ತೆ ಮತ್ತು ಅಂಡರ್ಪಾಸ್ ಸಮಸ್ಯೆಗಳನ್ನು ಬಗೆಹರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆ.ಜಿ.ಎಫ್. ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್