
ಬಾಗಲಕೋಟೆ, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ನಡೆಯಲಿರುವ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ಗೋಯೆಲ್ ಅವರು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಗಣೇಶೋತ್ಸವದ ಅಂತಿಮ ಹಂತದಲ್ಲಿ ನಡೆಯುವ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಗಣೇಶ ಮಂಡಳಿಗಳ ಸದಸ್ಯರು ಹಾಗೂ ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ.
ನಗರದ ಪ್ರಮುಖ ರಸ್ತೆಗಳು, ಮೆರವಣಿಗೆ ಸಾಗುವ ಮಾರ್ಗ, ಗಣೇಶ ಮೂರ್ತಿಗಳ ವಿಸರ್ಜನಾ ಸ್ಥಳ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಸಂಚಾರ ನಿರ್ವಹಣೆಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿದ ಎಸ್ಪಿ ಪಿಯೂಷ್ ಗೋಯೆಲ್ ಅವರು, ಪ್ರತಿಯೊಬ್ಬರೂ ತಮ್ಮ-ತಮ್ಮ ಕರ್ತವ್ಯ ಸ್ಥಳದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು.
ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದರ ಜೊತೆಗೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಮೆರವಣಿಗೆಯ ವೇಳೆ ವಿವಿಧ ಗಣೇಶ ಮಂಡಳಿಗಳ ನಡುವೆ ಸಮನ್ವಯ ಕಾಪಾಡುವುದು, ನಿಗದಿತ ಮಾರ್ಗದಲ್ಲೇ ಮೆರವಣಿಗೆ ಸಾಗುವಂತೆ ನೋಡಿಕೊಳ್ಳುವುದು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಯಿತು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರುವಂತೆ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ.
ಅಲ್ಲದೆ, ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳ ಸಹಕಾರ ಅಗತ್ಯವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸುವ ಮೂಲಕ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸುಗಮವಾಗಿ ನಡೆಯುವಂತೆ ಬಾಗಲಕೋಟೆ ನಗರದಲ್ಲಿ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಎಸ್ಪಿ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande