
ಮಂಡ್ಯ, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನದ ಬೆನ್ನಲ್ಲೇ ಮಂಡ್ಯದಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.
ಮಂಡ್ಯ ನಗರದ ಸಂಜಯ ವೃತ್ತದಲ್ಲಿ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಹಳೆ ಬೆಂಗಳೂರು–ಮೈಸೂರು ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಪದೇಪದೇ ಆದೇಶ ನೀಡುತ್ತಿರುವುದರಿಂದ ಮಂಡ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
“ಕಾವೇರಿ ನೀರು ಬಿಡುವ ವಿಚಾರದಲ್ಲಿ ಪದೇಪದೇ ಆದೇಶ ಬರುತ್ತಿದ್ದರೂ, ರಾಜ್ಯ ಸರ್ಕಾರ ತನ್ನ ನಿಲುವನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡಲು ವಿಫಲವಾಗುತ್ತಿದೆ.
ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇರುವ ಸಂದರ್ಭದಲ್ಲಿ ನೀರು ಹರಿಸುವ ಅಗತ್ಯವೇನು? ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು.
ದಿಟ್ಟ ನಿರ್ಧಾರ ಕೈಗೊಂಡು, ರೈತರಿಗೆ ನೀಡಿದ ಮಾತಿಗೆ ಬದ್ಧರಾಗಬೇಕು,” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ರಾಜ್ಯದ ಕುಡಿಯುವ ನೀರು ಹಾಗೂ ಕೃಷಿ ಅಗತ್ಯಗಳಿಗೆ ಆದ್ಯತೆ ನೀಡಬೇಕು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು. ಇದೇ ವೇಳೆ, ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R