ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಾಳೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಇತರ ಇಬ್ಬರು ಚುನಾವಣಾ ಆಯುಕ್ತರ ಭಿನ್ನಾಭಿಪ್ರಾಯದ ನಡುವೆಯೂ 14 ಬಾರಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡು ಗೌಪ್ಯವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರ
ಹರಿಪ್ರಸಾದ ಸಂಗ್ರಹ ಚಿತ್ರ


ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಇತರ ಇಬ್ಬರು ಚುನಾವಣಾ ಆಯುಕ್ತರ ಭಿನ್ನಾಭಿಪ್ರಾಯದ ನಡುವೆಯೂ 14 ಬಾರಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡು ಗೌಪ್ಯವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.

ಶುಕ್ರವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಅಸ್ತಿತ್ವವನ್ನು ಕಾಪಾಡುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ. ಆದರೆ ಒಂದು ರಾಜಕೀಯ ಪಕ್ಷ ಹಾಗೂ ಒಬ್ಬ ನಾಯಕನಿಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪ್ರಯತ್ನ ನಡೆದಿದೆ ಎಂದು ದೂರಿದರು.

ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಬಿಹಾರದಲ್ಲಿ 63 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಹಾಗೂ ಕರ್ನಾಟಕದಲ್ಲಿ 1.07 ಕೋಟಿ ಮತಗಳನ್ನು ತೆಗೆದುಹಾಕಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು. ಈ ಕುರಿತು ರಾಹುಲ್ ಗಾಂಧಿ ಅವರು 2025ರ ಫೆಬ್ರವರಿಯಲ್ಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸ್ಪಷ್ಟವಾಗಿ ತಿಳಿಸಿದ್ದರು. ಆದರೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಗೌರವವಿಲ್ಲದೆ ಆಯೋಗ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಕಳೆದ ಎರಡು ದಿನಗಳಿಂದ ಪ್ರಕಟವಾಗಿರುವ ವರದಿಗಳಲ್ಲಿಯೂ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾದ ನಡೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಅವರು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಅವರು ತಕ್ಷಣ ಕೇಂದ್ರ ಚುನಾವಣಾ ಆಯೋಗದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದರು. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಪ್ರಮುಖರ ವಿರುದ್ಧವೂ ತೀವ್ರ ಆರೋಪಗಳನ್ನು ಮಾಡಿದರು.

ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸೆ.26ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಭಾಗವಹಿಸಲು ಇತರ ರಾಜಕೀಯ ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಹೊಂದಿರುವ ಯಾವುದೇ ಪಕ್ಷದವರು ಪ್ರತಿಭಟನೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದರು.

ಎರಡನೇ ಹಂತದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಇತರ ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ 14 ಬಾರಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರೂ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು. ಇಬ್ಬರು ಆಯುಕ್ತರ ವಿರೋಧದ ನಡುವೆಯೂ ನಮೂನೆ–6ರಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಅಕ್ರಮಗಳ ಕುರಿತು ಧ್ವನಿ ಎತ್ತಿದ್ದ ರಾಹುಲ್ ಗಾಂಧಿ ಅವರು ದೇಶದ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಜ್ಞಾನೇಶ್ ಕುಮಾರ್ ಹಿಂದೆ ಹೇಳಿದ್ದರು. ಈಗ ನಡೆದಿರುವ ಅಸಂವಿಧಾನಿಕ ತೀರ್ಮಾನಗಳಿಗೆ ಜ್ಞಾನೇಶ್ ಕುಮಾರ್ ಅವರೇ ಕ್ಷಮೆ ಕೇಳುವ ಪರಿಸ್ಥಿತಿ ಬಂದಿದೆ ಎಂದು ಹರಿಪ್ರಸಾದ್ ಹೇಳಿದರು.

ಜ್ಞಾನೇಶ್ ಕುಮಾರ್ ಅವರು ಆ ಸ್ಥಾನದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ. ಈ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ಸಮಗ್ರ ಮತ್ತು ಸ್ವಾಯತ್ತ ಪರಿಶೀಲನೆ ನಡೆಯಬೇಕು ಎಂದು ಆಗ್ರಹಿಸಿದರು.

ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು 2,500 ಮತದಾರರ ಮತಗಳನ್ನು ತೆಗೆದುಹಾಕಬೇಕು ಎಂದು ಬರೆದಿದ್ದ ಪತ್ರವನ್ನು ಗುರುವಾರ ಬಿಡುಗಡೆ ಮಾಡಿ ಮಾಧ್ಯಮಗೋಷ್ಠಿ ನಡೆಸಿದ್ದೆ. ಇದೀಗ ತಮ್ಮ ಬಳಿ 65 ಸಾವಿರ ಮತಗಳನ್ನು ಅಳಿಸಿರುವುದಕ್ಕೆ ಸಂಬಂಧಿಸಿದ ಅರ್ಜಿಗಳಿವೆ. ಈ ಅರ್ಜಿಗಳಲ್ಲಿ ಯಾರ ಸಹಿಯೂ ಇಲ್ಲ ಎಂದು ಹರಿಪ್ರಸಾದ್ ಹೇಳಿದರು.

ಈ ಕುರಿತು ಪರಿಶೀಲನೆ ನಡೆಸಿದಾಗ ಅಳಿಸಲಾಗಿರುವ ಮತಗಳಲ್ಲಿ ಹೆಚ್ಚಿನವು ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಸೇರಿದ ಮತಗಳಾಗಿವೆ ಎಂದು ಆರೋಪಿಸಿದರು. ಬಡವರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಬಬಲೇಶ್ವರ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿಯೂ ಇಂತಹ ಪ್ರಯತ್ನಗಳು ನಡೆದಿವೆ ಎಂದು ದೂರಿದರು.

ತಪ್ಪುಗಳು ಮತದಾರರ ಪಟ್ಟಿಯಲ್ಲಲ್ಲ, ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲೇ ಆಗಿವೆ ಎಂದು ಹರಿಪ್ರಸಾದ್ ಆರೋಪಿಸಿದರು.

ಚುನಾವಣಾ ಆಯೋಗದ ಬಗ್ಗೆ ಪ್ರಶ್ನೆಗಳನ್ನು ಕೇಳಿದಾಗ ಆಯೋಗವೇ ಉತ್ತರಿಸಬೇಕು. ಆದರೆ ಬಿಜೆಪಿ ನಾಯಕರು ಚುನಾವಣಾ ಆಯೋಗದ ಪರವಾಗಿ ಸಮರ್ಥನೆಗೆ ಮುಂದಾಗುತ್ತಿದ್ದಾರೆ. ಆಯೋಗದ ವಿರುದ್ಧ ಕೇಳಲಾದ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande