
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಪೌರಕಾರ್ಮಿಕರ ಶ್ರಮವನ್ನು ಗೌರವಿಸುವ ಉದ್ದೇಶದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಪೌರಕಾರ್ಮಿಕರಿಗೆ ಗೌರವಾರ್ಪಣೆ’ ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಪೌರಕಾರ್ಮಿಕರ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿಟ್ಟರು.
ರಾಜ್ಯದ ನಗರ, ಪಟ್ಟಣಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಸೇವೆಯನ್ನು ಸ್ಮರಿಸಿ ಆಯೋಜಿಸಿದ್ದ ಬೃಹತ್ ಸಮಾವೇಶಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸಚಿವ ಬಾಲಕೃಷ್ಣ ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಪೌರಕಾರ್ಮಿಕರ ಸೇವಾ ಭದ್ರತೆ, ಸೌಲಭ್ಯಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
“ಪೌರಕಾರ್ಮಿಕರು ರಾಜ್ಯದ ನಗರ-ಪಟ್ಟಣಗಳ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪೌರಕಾರ್ಮಿಕರನ್ನು ವೇದಿಕೆಯಲ್ಲಿ ಗೌರವಿಸುವ ಮೂಲಕ ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R