
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.):
ಕೆಪಿಎಸ್ಸಿ ಮೂಲಕ ಪರೀಕ್ಷೆ ಬರೆದು ಆಯ್ಕೆಯಾಗಿದ್ದರೂ ಕಳೆದ 9 ವರ್ಷಗಳಿಂದ ನೇಮಕಾತಿ ಆದೇಶ ದೊರೆಯದೆ ಉದ್ಯೋಗದಿಂದ ವಂಚಿತರಾಗಿರುವ ಪಶುವೈದ್ಯಕೀಯ ಅಭ್ಯರ್ಥಿಗಳು ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.
ಪಶುವೈದ್ಯಕೀಯ ಅಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದ ಅಭ್ಯರ್ಥಿಗಳು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಅರ್ಹತೆಯ ಆಧಾರದ ಮೇಲೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಬಾರದು ಎಂದು ಆಗ್ರಹಿಸಿದರು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 300ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 9 ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದರೂ ಸಮಸ್ಯೆ ಬಗೆಹರಿಯದಿರುವುದು ಅಭ್ಯರ್ಥಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
“ಅಕ್ರಮ ಎಸಗಿದವರಿಗೆ ಶಿಕ್ಷೆಯಾಗಲಿ. ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ನಮಗೆ ಅನ್ಯಾಯವಾಗಬಾರದು.
ನೇಮಕಾತಿಗೆ ಸಂಬಂಧಿಸಿದ ‘ಕಂಡೀಷನಲ್ ಆರ್ಡರ್’ ಪ್ರತಿಯನ್ನು ಸಾರ್ವಜನಿಕಗೊಳಿಸಿ, ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸರ್ಕಾರ ಕೂಡಲೇ ನಮ್ಮ ಸಮಸ್ಯೆಗೆ ಪರಿಹಾರ ನೀಡಬೇಕು” ಎಂದು ಪ್ರತಿಭಟನಾಕಾರ ಸಂತೋಷ ಒತ್ತಾಯಿಸಿದರು.
ಸರ್ಕಾರದ ಮೌನ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ ನೀತಿಯನ್ನು ಖಂಡಿಸಿದ ಅಭ್ಯರ್ಥಿಗಳು, ತಮ್ಮ ಬಹುಕಾಲದ ಉದ್ಯೋಗದ ನಿರೀಕ್ಷೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R