
ಬಾಗಲಕೋಟೆ, 28 ಸೆಪ್ಟೆಂಬರ್ (ಹಿ.ಸ.)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನ–2026ದ ಅಂಗವಾಗಿ ಬಾಗಲಕೋಟೆ ನಗರದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಅವರು ಭಾಗವಹಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಮಕ್ಕಳೊಂದಿಗೆ ಸಂವಾದ ನಡೆಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಹಾಗೂ ಆರೈಕೆಯ ಕುರಿತು ಗಮನಹರಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಹಣ್ಣುಹಂಪಲು ವಿತರಿಸಿ, ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕ ಆಹಾರ, ಆರೋಗ್ಯಕರ ಜೀವನಶೈಲಿ ಹಾಗೂ ಸಮತೋಲಿತ ಆಹಾರದ ಮಹತ್ವದ ಕುರಿತು ಸರಳವಾಗಿ ಸಂವಾದ ನಡೆಸಲಾಯಿತು.
ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು, ಆರೋಗ್ಯ ತಪಾಸಣೆ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅದೇ ರೀತಿ ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು, ತಾಯಿ-ಮಗು ಆರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಸೇವಾ ಮನೋಭಾವವನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅಗತ್ಯಗಳ ಕುರಿತು ಮಾಹಿತಿ ಪಡೆಯಲಾಯಿತು.
‘ಅಂಗಳದ ಉತ್ಸವ’ ಕಾರ್ಯಕ್ರಮದ ಮೂಲಕ ಅಂಗನವಾಡಿ ಮಕ್ಕಳೊಂದಿಗೆ ಸಮಯ ಕಳೆಯಲಾಯಿತು. ಮಕ್ಕಳಿಗೆ ಹಣ್ಣುಹಂಪಲು ವಿತರಿಸುವುದರ ಜೊತೆಗೆ ಅವರ ಆರೋಗ್ಯ ಮತ್ತು ಪೌಷ್ಟಿಕತೆಯ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಯಿತು.
ಕರ್ನಾಟಕ ಬಿಜೆಪಿ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ‘ಸೇವಾ ಸಂಕಲ್ಪ ಅಭಿಯಾನ’ವು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ವಿವಿಧ ಸೇವಾ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಅಂಗನವಾಡಿ ಭೇಟಿ ಸೇರಿದಂತೆ ಹಲವು ಸಾರ್ವಜನಿಕ ಸಂಪರ್ಕ ಮತ್ತು ಸೇವಾ ಚಟುವಟಿಕೆಗಳನ್ನು ಒಳಗೊಂಡಿದೆ.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಶಾಸಕ ವೀರಣ್ಣ ಚರಂತಿಮಠ, ವಿಭಾಗೀಯ ಸಹಪ್ರಭಾರಿ ಬಸವರಾಜ ಯಂಕಂಚಿ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕೇಂದ್ರಗಳ ಮಕ್ಕಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande