
ಹುಬ್ಬಳ್ಳಿ, 29 ಸೆಪ್ಟೆಂಬರ್ (ಹಿ.ಸ.):
ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುವುದು, ರೈತರ ಬೆಳೆಗಳಿಗೆ ವೈಜ್ಞಾನಿಕ ಹಾಗೂ ಯೋಗ್ಯ ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಬೃಹತ್ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಹಾಗೂ ಮನೆ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ನೆಹರು ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ನಗರದ ಪ್ರಮುಖ ವೃತ್ತಗಳಲ್ಲೂ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ರೈತರು ಕಿತ್ತೂರು ಚನ್ನಮ್ಮ ವೃತ್ತವನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನೆಹರು ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿದ್ದರೂ ಇದುವರೆಗೆ ರೈತರ ಬೇಡಿಕೆ ಈಡೇರಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಹಾಗೂ ಯೋಗ್ಯ ಬೆಲೆ ನೀಡಬೇಕು. ಈ ಹಂಗಾಮಿನ ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ 5,500 ರೂ. ದರ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
2016ರಿಂದ ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ 31 ರೂ. ಇದ್ದು, 2019ರಿಂದ 2026ರವರೆಗೆ ಕಬ್ಬು ಬೆಳೆಯುವ ವೆಚ್ಚ ಮೂರು ಪಟ್ಟು ಹೆಚ್ಚಾಗಿದೆ. ಸಿಎಸಿಪಿ ಖರ್ಚು ವರದಿ ಆಧರಿಸಿ ಕನಿಷ್ಠ ಬೆಂಬಲ ಬೆಲೆಯನ್ನು 60 ರೂ.ಗೆ ನಿಗದಿಪಡಿಸಬೇಕು. ಸಕ್ಕರೆಯ ಗೃಹೋಪಯೋಗಿ ದರವನ್ನು 100 ರೂ.ಗೆ ನಿಗದಿಪಡಿಸಬೇಕು. ಸಕ್ಕರೆ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ 300 ರೂ. ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದ ಮಹಾದಾಯಿ ನೀರಾವರಿ ಯೋಜನೆಗೆ ಎಲ್ಲ ಇಲಾಖೆಗಳ ಪರವಾನಗಿಗಳನ್ನು ತ್ವರಿತವಾಗಿ ನೀಡಿಸಿ ಕಾಮಗಾರಿ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಆಗ್ರಹಿಸಿದರು.
ರೈತರೊಂದಿಗೆ ಮುಕ್ತ ಚರ್ಚೆಗೆ ಜೋಶಿ ಆಹ್ವಾನ
ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ.
2026ರ ಫೆಬ್ರವರಿಯಲ್ಲಿ ರೈತ ಮುಖಂಡರು ತಮ್ಮನ್ನು ಭೇಟಿಯಾಗಿ ಕಬ್ಬಿನ ಎಫ್‌ಆರ್‌ಪಿ ಬೆಲೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರತಿ ವರ್ಷ ಎಫ್‌ಆರ್‌ಪಿ ಹೆಚ್ಚಿಸುತ್ತಿದ್ದು, ಮೇ ತಿಂಗಳಲ್ಲಿ ಎಫ್‌ಆರ್‌ಪಿಯನ್ನು 365 ರೂ.ಗೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಲೆ ನಿಗದಿ ಸಮಿತಿ ಹಾಗೂ ರಾಜ್ಯ ಸರ್ಕಾರದ ಕಬ್ಬು ಆಯುಕ್ತರ ವರದಿ ಮತ್ತು ಶಿಫಾರಸುಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮೇ ತಿಂಗಳ ಬಳಿಕ ರೈತರಿಂದ ತಮ್ಮನ್ನು ಭೇಟಿಯಾಗುವಂತೆ ಯಾವುದೇ ಮನವಿ ಬಂದಿಲ್ಲ. ಆದಾಗ್ಯೂ, ರೈತರ ಮನವಿಯನ್ನು ಪರಿಗಣಿಸಿಲ್ಲ ಎಂಬ ಭಾವನೆ ಇದ್ದರೆ ಅದಕ್ಕೆ ವಿನಮ್ರವಾಗಿ ಸ್ಪಷ್ಟನೆ ನೀಡುವುದಾಗಿ ತಿಳಿಸಿರುವ ಜೋಶಿ, ಪ್ರತಿ ವರ್ಷದಂತೆ ಈ ಬಾರಿಯೂ ಸೂಕ್ತ ಬೆಲೆ ನೀಡಲಾಗುವುದು ಎಂದು ಹೇಳಿದ್ದಾರೆ.
ರೈತ ಮುಖಂಡರು ಹಾಗೂ ಹೋರಾಟಗಾರರಿಗೆ ನವದೆಹಲಿಗೆ ಬರುವಂತೆ ಮುಕ್ತ ಆಹ್ವಾನ ನೀಡಿರುವ ಅವರು, ರೈತರನ್ನು ಗೌರವದಿಂದ ಸ್ವಾಗತಿಸಿ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಲಾಗುವುದು. ರೈತರ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಲವು ಬದಲಾವಣೆಗಳನ್ನು ತಂದಿದೆ. ಕಬ್ಬು ಬೆಳೆಗಾರರಲ್ಲಿ ಉಂಟಾಗಿರುವ ಗೊಂದಲ, ಸಮಸ್ಯೆಗಳು ಹಾಗೂ ಇತರ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲು ರೈತ ಮುಖಂಡರನ್ನು ಗೌರವಪೂರ್ವಕವಾಗಿ ಆಹ್ವಾನಿಸುತ್ತೇವೆ. ಅವರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜೋಶಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.