ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಸಿಎಸ್ಗೆ ಸಿಎಂ ಆದೇಶ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.): ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂ. ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಸೂಚ
ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಸಿಎಸ್ಗೆ ಸಿಎಂ ಆದೇಶ


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):

ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂ. ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ತಕ್ಷಣ ಸ್ಪಂದಿಸಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಈ ಕುರಿತು ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

“ಬ್ಯಾಂಕ್ ಆಡಳಿತ ಮಂಡಳಿಗೆ ಪತ್ರ ಬರೆಯಿರಿ. ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ ಹಣವನ್ನು ಸಾಲದ ಕಂತಿಗೆ ಕಡಿತಗೊಳಿಸದಂತೆ ಸ್ಪಷ್ಟವಾಗಿ ತಿಳಿಸಿ” ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಗೃಹಲಕ್ಷ್ಮಿ ಹಣ ಕಡಿತಕ್ಕೆ ಆಕ್ಷೇಪ

ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಪ್ರತಿ ತಿಂಗಳು 1.24 ಕೋಟಿ 48 ಸಾವಿರ ಕುಟುಂಬದ ಯಜಮಾನಿಯರ ಖಾತೆಗೆ ಜಮೆಯಾಗುತ್ತಿರುವ 2,000 ರೂ. ಹಣವು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ನಿತ್ಯದ ಅಗತ್ಯಗಳು, ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಸ್ವಾವಲಂಬನೆಗೆ ನೆರವಾಗುತ್ತಿದೆ ಎಂದು ತಿಳಿಸಿದ್ದಾರೆ.

ಆದರೆ, ವಾಣಿಜ್ಯ ಬ್ಯಾಂಕುಗಳು, ಖಾಸಗಿ ಹಣಕಾಸು ಕಂಪನಿಗಳು ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಜಮೆಯಾದ ತಕ್ಷಣ ಹಳೆಯ ಸಾಲದ ಬಾಕಿ ಅಥವಾ ಬಡ್ಡಿಯ ನೆಪದಲ್ಲಿ ಹಣ ಕಡಿತ ಮಾಡಿಕೊಳ್ಳುತ್ತಿರುವ ಆರೋಪಗಳಿವೆ. ಫಲಾನುಭವಿಗಳ ಗಮನಕ್ಕೂ ತರದೆ ಹಣ ಕಡಿತ ಮಾಡುತ್ತಿರುವುದರಿಂದ ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಪರಿಶೀಲನಾ ಸಮಿತಿ ಸಭೆಗಳಲ್ಲೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣವನ್ನು ಸಾಲದ ಕಂತು ಅಥವಾ ಬಡ್ಡಿಗೆ ಮುಟ್ಟುಗೋಲು ಹಾಕಿಕೊಳ್ಳಬಾರದು ಎಂದು ಜಿಲ್ಲಾಡಳಿತಗಳು ಸ್ಪಷ್ಟಪಡಿಸಿವೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಸುತ್ತೋಲೆ ಹೊರಡಿಸಲು ಮನವಿ

ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಬ್ಯಾಂಕುಗಳು ಗೃಹಲಕ್ಷ್ಮಿ ಅನುದಾನವನ್ನು ಫಲಾನುಭವಿಗಳ ಹಳೆಯ ಸಾಲ, ಕೃಷಿಯೇತರ ಸಾಲ ಅಥವಾ ಬಡ್ಡಿಗೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ಮೂಲಕ ಕಠಿಣ ಸುತ್ತೋಲೆ ಹೊರಡಿಸಬೇಕು. ಮಹಿಳೆಯರು ಕುಟುಂಬ ನಿರ್ವಹಣೆಗೆ ಹಣವನ್ನು ಮುಕ್ತವಾಗಿ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದಂತೆ ಸ್ಥಳದಲ್ಲೇ ಬಲವಂತವಾಗಿ ವಸೂಲಿ ಮಾಡುವ ಅಥವಾ ಬೆದರಿಕೆ ಒಡ್ಡುವ ಖಾಸಗಿ ಹಣಕಾಸು ಕಂಪನಿಗಳು ಮತ್ತು ಏಜೆಂಟರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ಸುಲಿಗೆ ಪ್ರಕರಣ ದಾಖಲಿಸುವುದು ಹಾಗೂ ಸಂಬಂಧಪಟ್ಟವರ ಪರವಾನಗಿ ರದ್ದುಪಡಿಸುವಂತಹ ಕ್ರಮ ಕೈಗೊಳ್ಳಬೇಕು ಎಂದು ದಿನೇಶ್ ಗೂಳಿಗೌಡ ಒತ್ತಾಯಿಸಿದ್ದಾರೆ.

ಮಹಿಳೆಯರ ಸ್ಪಷ್ಟ ಲಿಖಿತ ಒಪ್ಪಿಗೆಯಿಲ್ಲದೆ ಈಗಾಗಲೇ ಸಾಲದ ಬಾಕಿಗೆ ಕಡಿತ ಮಾಡಿರುವ ಹಣವನ್ನು ತಕ್ಷಣವೇ ಆಯಾ ಮಹಿಳೆಯರ ಖಾತೆಗೆ ಮರುಜಮೆ ಮಾಡಿಸುವಂತೆ ಬ್ಯಾಂಕುಗಳಿಗೆ ಸೂಚಿಸಬೇಕು. ಈ ಕುರಿತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಕ್ರಮ ಹಣ ಕಡಿತ ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರ ಮೇಲುಸ್ತುವಾರಿ ವಹಿಸಬೇಕು. ವಿವಿಧ ಇಲಾಖೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ನಡೆಸುವ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಈ ವಿಷಯವನ್ನು ಕಡ್ಡಾಯವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande