
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):
ಅನಧಿಕೃತ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ನಗರದ ಜೆ.ಪಿ. ನಗರ 9ನೇ ಫೇಸ್ನ 5ನೇ ‘ಬಿ’ ಬ್ಲಾಕ್ ಬಡಾವಣೆಯಲ್ಲಿ ಸುಮಾರು ₹13.50 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಆಲಹಳ್ಳಿ ಗ್ರಾಮದ ಸರ್ವೆ ನಂ.91ರಲ್ಲಿ ಸುಮಾರು 12,100 ಚದರ ಅಡಿ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳು ಹಾಗೂ ಇತರೆ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ತನ್ನ ವಶಕ್ಕೆ ಪಡೆದುಕೊಂಡಿದೆ.
ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಲಯದ ವಲಯ ಆಯುಕ್ತರು, ಅಭಿಯಂತರ ಅಧಿಕಾರಿ-3, ದಕ್ಷಿಣ ವಿಭಾಗದ ಕಾರ್ಯಪಾಲಕ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.
“ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಪ್ರಾಧಿಕಾರದ ಆಸ್ತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಸಾರ್ವಜನಿಕ ಆಸ್ತಿಯ ಅಕ್ರಮ ಬಳಕೆಗೆ ಅವಕಾಶ ನೀಡುವುದಿಲ್ಲ” ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R