ಆರೋಗ್ಯಕರ ಜೀವನಶೈಲಿಯಿಂದ ಆರೋಗ್ಯಕರ ಸಮಾಜ ನಿರ್ಮಾಣ: ಡಿಸಿ ಡಾ. ಕುಮಾರ
ಮಂಡ್ಯದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಆರೋಗ್ಯಕರ ಜೀವನಶೈಲಿ, ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಹಾಗೂ ಸಮರ್ಪಕ ನಿದ್ರೆಯ ಮಹತ್ವವನ್ನು ತಿಳಿಸಿದರು. ಬಾಲ್ಯದಿಂದಲೇ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.
mandya-world-heart-day-dc-dr-kumar-health-awareness


ಮಂಡ್ಯ, 29 ಸೆಪ್ಟೆಂಬರ್ (ಹಿ.ಸ.):

ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಾರ್ಡಿಯೊಲಾಜಿಕಲ್ ಸೊಸೈಟಿ ಇಂಡಿಯಾ ವತಿಯಿಂದ ಆಯೋಜಿಸಿದ್ದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಆರೋಗ್ಯವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಹಾಗೂ ಸಮರ್ಪಕ ನಿದ್ರೆಗೆ ಆದ್ಯತೆ ನೀಡಬೇಕು. ಹೃದಯವು ಜೀವನದುದ್ದಕ್ಕೂ ನಿರಂತರವಾಗಿ ಕಾರ್ಯನಿರ್ವಹಿಸುವ ಪ್ರಮುಖ ಅಂಗವಾಗಿದ್ದು, ಅದರ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಅತಿ ಚಿಕ್ಕ ಮಕ್ಕಳಿಂದ ಹಿಡಿದು ಯುವಜನರಲ್ಲಿಯೂ ಹೃದಯ ಸಂಬಂಧಿತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಅಸಮರ್ಪಕ ಆಹಾರ ಪದ್ಧತಿ, ದೈಹಿಕ ಚಟುವಟಿಕೆಯ ಕೊರತೆ, ಮಾನಸಿಕ ಒತ್ತಡ ಹಾಗೂ ನಿದ್ರೆಯ ಕೊರತೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಅವರು ತಿಳಿಸಿದರು.

ಆದ್ದರಿಂದ ಬಾಲ್ಯದಿಂದಲೇ ಆರೋಗ್ಯಕರ ಆಹಾರ ಪದ್ಧತಿ ಹಾಗೂ ನಿಯಮಿತ ದೈಹಿಕ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಕಾಯಿಲೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಡಾ. ಕುಮಾರ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಪಂದನ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ. ಹೇಮಾ ಎಸ್., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬೆಟ್ಟಸ್ವಾಮಿ, ಮೀರಾಶಿವಲಿಂಗಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande