ಆಹಾರದಲ್ಲಿ ಹೆಚ್ಚಿನ ಉಪ್ಪು ಬಳಕೆ ತಡೆಗೆ ಆರೋಗ್ಯ ಇಲಾಖೆಯಿಂದ ಕಾರ್ಯ ಯೋಜನೆ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.): ರಾಜ್ಯದಲ್ಲಿ ಅಧಿಕ ರಕ್ತದೊತ್ತಡ ಹಾಗೂ ಹೃದಯಾಘಾತ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಉಪ್ಪಿನ ಸೇವನೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಹೊಸ ಕಾರ್ಯಯೋಜನೆ ರೂಪಿಸಿದೆ. 2030ರ ವೇಳೆಗೆ ಜನರ ದೈನಂದ
ಆಹಾರದಲ್ಲಿ ಹೆಚ್ಚಿನ ಉಪ್ಪು ಬಳಕೆ ತಡೆಗೆ ಆರೋಗ್ಯ ಇಲಾಖೆಯಿಂದ ಕಾರ್ಯ ಯೋಜನೆ


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):

ರಾಜ್ಯದಲ್ಲಿ ಅಧಿಕ ರಕ್ತದೊತ್ತಡ ಹಾಗೂ ಹೃದಯಾಘಾತ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಉಪ್ಪಿನ ಸೇವನೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಹೊಸ ಕಾರ್ಯಯೋಜನೆ ರೂಪಿಸಿದೆ.

2030ರ ವೇಳೆಗೆ ಜನರ ದೈನಂದಿನ ಉಪ್ಪಿನ ಬಳಕೆಯನ್ನು ಶೇ.30ರಷ್ಟು ಕಡಿತಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ವಿಧಾನಸೌಧದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಕರ್ನಾಟಕ ರಾಜ್ಯ ಬಹು ವಲಯ ಉಪ್ಪು ಕಡಿತ ಮತ್ತು ಆರೋಗ್ಯಕರ ಆಹಾರ ಪದ್ಧತಿ ಉತ್ತೇಜನ ಕಾರ್ಯಯೋಜನೆಗೆ ಚಾಲನೆ ನೀಡಿದರು.

ಮನೆಗಳಲ್ಲಿ ಮಾತ್ರವಲ್ಲದೆ ಹೋಟೆಲ್ಗಳು ಸೇರಿದಂತೆ ಹೊರಗಿನಿಂದ ಸೇವಿಸುವ ಆಹಾರ ಹಾಗೂ ಸಂಸ್ಕರಿತ ಮತ್ತು ಪ್ಯಾಕೇಜ್ ಮಾಡಿದ ಆಹಾರ ಪದಾರ್ಥಗಳಲ್ಲಿ ಅತಿಯಾದ ಉಪ್ಪಿನ ಬಳಕೆಯನ್ನು ನಿಯಂತ್ರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಆಹಾರ ಪದ್ಧತಿ ಕುರಿತು ಆರೋಗ್ಯ ವ್ಯವಸ್ಥೆಯ ಮೂಲಕ ಸಮಾಲೋಚನೆ ನೀಡುವುದರ ಜೊತೆಗೆ ಕಡಿಮೆ ಸೋಡಿಯಂ ಹಾಗೂ ಪೊಟ್ಯಾಸಿಯಂಯುಕ್ತ ಉಪ್ಪಿನ ಬಳಕೆಗೆ ಸಂಬಂಧಿಸಿದ ಸಂಶೋಧನೆಗೂ ಉತ್ತೇಜನ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಈ ಸಂದರ್ಭದಲ್ಲಿ ಸಚಿವ ಯು.ಟಿ. ಖಾದರ್ ಮಾತನಾಡಿ “ಆಹಾರ ಪದ್ಧತಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಡೆಗಟ್ಟಲು ಸರ್ಕಾರ ಬದ್ಧವಾಗಿದೆ. ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿವಿಧ ಇಲಾಖೆಗಳ ಸಹಯೋಗ ಅಗತ್ಯ,” ಎಂದು ಹೇಳಿದರು.

ಈ ಕಾರ್ಯಯೋಜನೆಯಡಿ ಪ್ರಧಾನಮಂತ್ರಿ ಪೋಷಣ್ ಯೋಜನೆಯಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡುವ ಕ್ರಮಗಳು, ಗೃಹ ಆರೋಗ್ಯ ಕಾರ್ಯಕ್ರಮದ ಮೂಲಕ ಆಹಾರ ಪದ್ಧತಿ ಕುರಿತು ಸಮಾಲೋಚನೆ ಹಾಗೂ ಸಾಂಕ್ರಾಮಿಕವಲ್ಲದ ಕಾಯಿಲೆಗಳ ತಡೆ ಮತ್ತು ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದಡಿ ಆಹಾರಕ್ಕೆ ಸಂಬಂಧಿಸಿದ ಅಪಾಯಕಾರಿ ಅಂಶಗಳ ಕುರಿತು ಜಾಗೃತಿ ಮೂಡಿಸುವ ಕ್ರಮಗಳನ್ನು ಬಲಪಡಿಸಲು ಉದ್ದೇಶಿಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರು ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪು ಸೇವಿಸುವುದು ಸೂಕ್ತ. ಹೆಚ್ಚಿನ ಸೋಡಿಯಂ ಸೇವನೆಯು ರಕ್ತದೊತ್ತಡ ಹೆಚ್ಚಳಕ್ಕೆ ಕಾರಣವಾಗಿದ್ದು, ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನೂ ಹೆಚ್ಚಿಸಬಹುದು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಅಧ್ಯಕ್ಷತೆಯ ತಾಂತ್ರಿಕ ಸಲಹಾ ಸಮಿತಿ ಉಪ್ಪಿನ ಸೇವನೆ ಕಡಿತ ಹಾಗೂ ಆರೋಗ್ಯಕರ ಆಹಾರ ಪದ್ಧತಿ ಕುರಿತು ವೈಜ್ಞಾನಿಕ ಮಾರ್ಗದರ್ಶನ ನೀಡಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande