
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲೆಯ ನದಿ, ಕೆರೆ, ಬಾವಿ ಸೇರಿದಂತೆ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುವುದನ್ನು ತಡೆಯುವ ಉದ್ದೇಶದಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಹಾಗೂ ರಾಸಾಯನಿಕ ಯುಕ್ತ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ಬಳ್ಳಾರಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಪರಿಸರ ಸಂರಕ್ಷಣೆಗಾಗಿ ಕೇವಲ ‘ಹಸಿರು ಪಟಾಕಿ'ಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಬಳಸಲು ಅನುಮತಿಸಲಾಗಿದೆ. ಗಣೇಶ ಹಬ್ಬದ ಅವಧಿಯಲ್ಲಿ ನಿಯಮ ಉಲ್ಲಂಘನೆಯಾಗದಂತೆ ಕಣ್ಗಾವಲಿಡಲು ನಗರ, ಪಟ್ಟಣ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಶೇಷ ಜಾಗೃತ ದಳ ತಂಡಗಳನ್ನು ರಚಿಸಲಾಗಿದೆ.
*ತಂಡದ ಮುಖ್ಯಸ್ಥರು:* ಮಹಾನಗರ ಪಾಲಿಕೆ ಆಯುಕ್ತರು, ಪೌರಾಯುಕ್ತರು, ತಹಶೀಲ್ದಾರರು, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು.
*ತಂಡದ ಸದಸ್ಯರು:* ಸಂಬ0ಧಿಸಿದ ವ್ಯಾಪ್ತಿಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ, ಸಾರಿಗೆ ಇಲಾಖೆಯ ಹಿರಿಯ/ಕಿರಿಯ ಮೋಟಾರ್ ವಾಹನ ನಿರೀಕ್ಷಕರು.
*ಸದಸ್ಯ ಸಂಚಾಲಕರು:* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ.
*ಕಾರ್ಯನಿರ್ವಹಣೆ:*
ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಯಾವುದೇ ಪಿ.ಒ.ಪಿ ಗಣೇಶ ಮೂರ್ತಿಗಳು ಹಾಗೂ ಹಾನಿಕಾರಕ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ತಯಾರಿಕೆ, ಸಾಗಾಣಿಕೆ ಮತ್ತು ಮಾರಾಟ ನಡೆಯದಂತೆ ಕಟ್ಟುನಿಟ್ಟಾಗಿ ನಿಗಾವಹಿಸುವುದು. ಪಟಾಕಿ ವ್ಯಾಪಾರಿಗಳಲ್ಲಿ ಹಸಿರು ಪಟಾಕಿ ಮಾರುವವರಿಗೆ ಮಾತ್ರ ಪರವಾನಗಿ ನೀಡುವುದು. ನಿಷೇಧಿತ ಪಟಾಕಿ ಮಾರಾಟ ಕಂಡುಬಂದರೆ ಮುಟ್ಟುಗೋಲು ಹಾಕಿಕೊಂಡು ಕಠಿಣ ಕಾನೂನು ಕ್ರಮ ಕೈಗೊಳ್ಳುವುದು.
ಎಲ್ಲಾದರೂ ಅಕ್ರಮ ಪಿ.ಒ.ಪಿ ವಿಗ್ರಹಗಳು ಕಂಡುಬ0ದಲ್ಲಿ, ಅವುಗಳನ್ನು ತಕ್ಷಣವೇ ಜಪ್ತಿ ಮಾಡಿ ಧಾರ್ಮಿಕತೆಗೆ ಧಕ್ಕೆ ಬಾರದಂತೆ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು. ಸಾರ್ವಜನಿಕರಲ್ಲಿ ಮಣ್ಣಿನ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಬಳಕೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವುದು.
ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಕರ್ತವ್ಯದಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ ಕಂಡುಬ0ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್