
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ ಎ.ಎಸ್. ಪಾಟೀಲ ಕ್ರೀಡಾಂಗಣದಲ್ಲಿ ಮನಗೂಳಿ ಅಗಸಿ ‘ಎ’ ವಲಯದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ಜರುಗಿತು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ ಶೆಡಶ್ಯಾಳ ಹಾಗೂ ನಗರ ಘಟಕದ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಯ್ಯದ್ ಜುಬೇರ್ ಕೆರೂರ ಅವರು ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಸದೃಢತೆ ಮಾತ್ರವಲ್ಲದೆ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸಲು ಸಾಧ್ಯವಾಗುತ್ತದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಕಲಿಸಿಕೊಡುತ್ತದೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಮನಗೂಳಿ ಅಗಸಿ ‘ಎ’ ವಲಯದ ವ್ಯಾಪ್ತಿಯ ವಿವಿಧ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಕ್ರೀಡಾಂಗಣದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಅರೇಶಂಕರ, ಉಪಾಧ್ಯಕ್ಷ ಅಜೀಜ್ ಅರಳಿಮಟ್ಟಿ, ಉರ್ದು ಸಂಘದ ಅಧ್ಯಕ್ಷ ಬಸೀರ್ ನದಾಫ್, ಜವೀರ್ ನಾಗರಬೌಡಿ, ಶಿಕ್ಷಣ ಸಂಯೋಜಕರಾದ ಹಿರೇಮಠ್ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು, ಶಿಕ್ಷಕರು, ಕ್ರೀಡಾಪಟುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡಾಕೂಟದ ಸಂಘಟನೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ವೀರೇಶ್ ಮಾಶೆಟ್ಟಿ ಹಾಗೂ ಸುಗರಾ ಚೌದ್ರಿ ಅವರು ಪ್ರಮುಖ ಪಾತ್ರ ವಹಿಸಿದರು.
ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ಮುಂದಿನ ಹಂತದ ಕ್ರೀಡಾ ಸ್ಪರ್ಧೆಗಳಿಗೆ ಅವರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande