
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವ್ಯಸನಮುಕ್ತ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದೃಢ ದೇಹ ಹಾಗೂ ಸದೃಢ ಮನಸ್ಸನ್ನು ಬೆಳೆಸಿಕೊಳ್ಳುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್. ಸಂಬಣ್ಣಿ ಕರೆ ನೀಡಿದರು.
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಡಾ. ಗಂಗಾಧರ ಎಸ್. ಸಂಬಣ್ಣಿ ಉದ್ಘಾಟಿಸಿ ಮಾತನಾಡಿದರು.
ಯುವಜನತೆ ಇಂದು ವಿವಿಧ ರೀತಿಯ ವ್ಯಸನಗಳಿಗೆ ಒಳಗಾಗುತ್ತಿರುವ ಸಂದರ್ಭದಲ್ಲಿ ಅವರನ್ನು ಕ್ರೀಡೆಯತ್ತ ಆಕರ್ಷಿಸುವ ಅಗತ್ಯವಿದೆ. ಕ್ರೀಡೆ ದೈಹಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಯುವಕ-ಯುವತಿಯರೂ ತಮ್ಮ ದಿನನಿತ್ಯದ ಜೀವನದಲ್ಲಿ ಕ್ರೀಡೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಹಾಗೂ ಭಾರತ ಸರ್ಕಾರದ ರಾಷ್ಟ್ರೀಯ ವಚನ ಸಮಿತಿಯ ಸದಸ್ಯ ಡಾ. ಜಾವೀದ್ ಎಂ. ಜಮಾದಾರ್ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವುದರೊಂದಿಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹೆಸರು ಮಾಡಬೇಕು ಎಂದು ಆಶಿಸಿದರು.
ಕ್ರೀಡೆಯಲ್ಲಿ ಗೆಲುವು-ಸೋಲು ಸಹಜ. ಆದರೆ ಸೋಲಿನಿಂದ ಪಾಠ ಕಲಿತು, ಗೆಲುವಿನ ಗುರಿಯೊಂದಿಗೆ ನಿರಂತರ ಅಭ್ಯಾಸ ಮಾಡುವ ಮನೋಭಾವ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿರಬೇಕು. ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಇಂತಹ ಕ್ರೀಡಾಕೂಟಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ವಿಜಯಪುರದ ಸಂಜೀವ್ ಸಿ. ಕೋತ್, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸಂತೋಷ್ ಕುಮಾರ್ ಎಸ್. ನೆಗಡಿ, ನ್ಯಾಯವಾದಿ ನಾಗರಾಜ್ ಪಿ. ಲಂಬು ಅವರು ಸಾಂಕೇತಿಕವಾಗಿ ಹಸಿರು ನಿಶಾನೆ ತೋರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಬೋವಿ, ಅಧೀಕ್ಷಕಿ ಪ್ರಿಯಾಂಕ ಜಿ. ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ದೈವಾಡಿ ಅವರು ಸ್ವಾಗತ ಹಾಗೂ ಪ್ರಾಸ್ತಾವಿಕವಾಗಿ ಮಾತನಾಡಿ, ದಸರಾ ಕ್ರೀಡಾಕೂಟದ ಉದ್ದೇಶ ಹಾಗೂ ಕ್ರೀಡಾಪಟುಗಳಿಗೆ ಇಲಾಖೆಯಿಂದ ನೀಡಲಾಗುತ್ತಿರುವ ಪ್ರೋತ್ಸಾಹದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಶ್ರೀಧರ್ ಜೋಶಿ ನಿರೂಪಿಸಿ ವಂದಿಸಿದರು.
ಕ್ರೀಡಾಕೂಟದಲ್ಲಿ ವಿಜಯಪುರ ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಿಂದ ಆಗಮಿಸಿದ ಕ್ರೀಡಾಪಟುಗಳು, ರೆಫರಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಇಲಾಖೆಯ ಕೋಚ್ಗಳು, ಮಾರ್ಕರ್ಗಳು ಹಾಗೂ ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ವಿವಿಧ ಕ್ರೀಡಾ ವಿಭಾಗಗಳಲ್ಲಿ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande