
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.):
ಪತ್ರಕರ್ತೆ, ಕಂಟೆಂಟ್ ಕ್ರಿಯೇಟರ್ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಡಾ. ನಂದಿನಿ ಕೆ.ಎಲ್. ಅವರಿಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಪ್ರತಿಷ್ಠಿತ ‘ವೀಡಿಯೋ ಕ್ರಿಯೇಟರ್ ಅವಾರ್ಡ್ 2026’ ನೀಡಿ ಗೌರವಿಸಲಾಗಿದೆ.
ಕರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಡಿಜಿಟಲ್ ಮಾಧ್ಯಮದ ಮೂಲಕ ಜನರಿಗೆ ಪರಿಚಯಿಸುವಲ್ಲಿ ಅವರು ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ನಂದಿನಿ ಕೆ.ಎಲ್. ಅವರು ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಇಲಾಖೆಯ ಹಲವು ಗಣ್ಯರು ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಪ್ರವಾಸೋದ್ಯಮವನ್ನು ಜನರಿಗೆ ತಲುಪಿಸುವಲ್ಲಿ ಕಂಟೆಂಟ್ ಕ್ರಿಯೇಟರ್ಗಳ ಪಾತ್ರ ಪ್ರಮುಖವಾಗಿದ್ದು, ಸ್ಥಳೀಯ ಇತಿಹಾಸ, ಪ್ರವಾಸಿ ತಾಣಗಳು ಮತ್ತು ಸಾಂಸ್ಕೃತಿಕ ವೈವಿಧ್ಯವನ್ನು ಸರಳ ಹಾಗೂ ಆಕರ್ಷಕ ವೀಡಿಯೋಗಳ ಮೂಲಕ ಪರಿಚಯಿಸುವ ಕಾರ್ಯದಲ್ಲಿ ಡಾ. ನಂದಿನಿ ಕೆ.ಎಲ್. ತೊಡಗಿಸಿಕೊಂಡಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಡಾ. ನಂದಿನಿ ಕೆ.ಎಲ್. ಅವರು, “ಕರ್ನಾಟಕದ ಪ್ರವಾಸೋದ್ಯಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಡಿಜಿಟಲ್ ಮಾಧ್ಯಮದ ಮೂಲಕ ಪ್ರಚಾರ ಮಾಡುವ ತಮ್ಮ ಪ್ರಯತ್ನ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R