
ಕೆ.ಆರ್.ಪೇಟೆ, 30 ಸೆಪ್ಟೆಂಬರ್ (ಹಿ.ಸ.):
ಬಿಸಿಲಿನ ತೀವ್ರತೆಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಹೊತ್ತಿ ಉರಿದು ಸ್ಫೋಟಗೊಂಡ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪೊಲೀಸ್ ಠಾಣೆ ಮುಂಭಾಗದ ಏರ್ಟೆಲ್ ಟವರ್ ಸಮೀಪವಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ಏಕಾಏಕಿ ಧಗಧಗನೆ ಹೊತ್ತಿ ಉರಿದಿದೆ. ಬಳಿಕ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಟವರ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿವೆ.
ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಟ್ರಾನ್ಸ್ಫಾರ್ಮರ್ ಪರಿಶೀಲನೆ ನಡೆಸಿದ್ದಾರೆ.
“ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಬೆಂಕಿ ನಂದಿಸಲಾಗಿದ್ದು, ಹಾನಿಯ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R