
ಬೆಳಗಾವಿ, 04 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19) ಹಾಗೂ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಅತಿ ವೇಗವಾಗಿ ಬಂದ ಟಿಪ್ಪರ್ ವಾಹನವು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಭೀಕರತೆಗೆ ಬೈಕ್ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಸುಳಿವು ಅರಿತ ಟಿಪ್ಪರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಘಟಪ್ರಭಾ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟಿಪ್ಪರ್ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R