
ಗದಗ, 05 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವಾ ಅಭಿಯಾನ–ಜನ ಸಂಪರ್ಕ ಸಭೆಯ ಜಿಲ್ಲಾ ಮಟ್ಟದ ಸಭೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರ ನೇತೃತ್ವದಲ್ಲಿ ನಡೆಯಿತು.
‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಹಾಗೂ ‘ಅಹವಾಲು ನಿಮ್ಮದು, ಪರಿಹಾರ ನಮ್ಮದು’ ಎಂಬ ಆಶಯದೊಂದಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಮಂಡಿಸಿದರು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಸಲ್ಲಿಕೆಯಾಗಿದ್ದು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು.
ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಜನಸಾಮಾನ್ಯರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದರ ಜೊತೆಗೆ, ಅವರ ಸಮಸ್ಯೆಗಳನ್ನು ನೇರವಾಗಿ ಅರಿತು ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವಾ ಅಭಿಯಾನದ ಜನ ಸಂಪರ್ಕ ಸಭೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಸಾಮಾನ್ಯವಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿವಿಧ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸಿ, ಹಲವು ಬಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರುತ್ತದೆ. ಇದನ್ನು ತಪ್ಪಿಸಿ, ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿ ಅರ್ಜಿಗೂ ಪರಿಹಾರ ದೊರೆಯುವವರೆಗೆ ಅನುಸರಣೆ ಪ್ರತಿ ಮನೆಗೂ ಅಹವಾಲು ಸಲ್ಲಿಸಲು ಅರ್ಜಿ ನಮೂನೆಗಳನ್ನು ನೀಡಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅರ್ಜಿ ನಮೂನೆಯಲ್ಲಿ ಸ್ಪಷ್ಟವಾಗಿ ನಮೂದಿಸಿ ಸಲ್ಲಿಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಯನ್ನು ಸಂಬಂಧಿಸಿದ ಇಲಾಖೆಯ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಅರ್ಜಿಯನ್ನು ಸ್ವೀಕರಿಸಿ ಅಲ್ಲಿಗೇ ಕೈಬಿಡುವ ವ್ಯವಸ್ಥೆ ಇದಲ್ಲ. ಪ್ರತಿ ಅರ್ಜಿಯೂ ಸಂಬಂಧಿಸಿದ ಸರ್ಕಾರದ ಹಂತಕ್ಕೆ ಹೋಗಬೇಕು. ಅರ್ಜಿಯ ಕುರಿತು ಕೈಗೊಂಡ ಕ್ರಮ ಹಾಗೂ ಸಮಸ್ಯೆಗೆ ದೊರೆತ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಜನ ಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾದ ಅಹವಾಲುಗಳ ಮೇಲೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಶನಿವಾರ ಪರಿಶೀಲನೆ ನಡೆಸಲಾಗುವುದು. ಸಮಸ್ಯೆ ಬಗೆಹರಿಯುವವರೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು. ಹೀಗಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.
ಜನರ ಬಳಿಗೆ ಸರ್ಕಾರದ ಸೇವೆ : ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಯಾವುದೇ ಕಾರಣಕ್ಕೂ ಅರ್ಹ ವ್ಯಕ್ತಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು. ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿರಬೇಕು ಎಂಬ ಉದ್ದೇಶದಿಂದ ಈ ರೀತಿಯ ಜನ ಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮಧ್ಯವರ್ತಿಗಳನ್ನು ಅವಲಂಬಿಸದೆ, ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಜನರ ಅಹವಾಲುಗಳನ್ನು ಆಲಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಅಧಿಕಾರಿಗಳಿಂದ ಸ್ಥಳದಲ್ಲಿಯೇ ಸ್ಪಂದನೆ ಸಭೆಯಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪೊಲೀಸ್, ಅರಣ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಅಧಿಕಾರಿಗಳ ಮುಂದಿಟ್ಟರು. ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಸಮಸ್ಯೆಯ ಸ್ವರೂಪ ಹಾಗೂ ಸಂಬಂಧಿಸಿದ ಇಲಾಖೆಯ ವ್ಯಾಪ್ತಿಯನ್ನು ಗುರುತಿಸಿ ಅಗತ್ಯ ಕ್ರಮಕ್ಕೆ ಮುಂದಾದರು.
ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ನೀಡಲಾಯಿತು. ಇನ್ನು ಕೆಲವು ಸಮಸ್ಯೆಗಳಿಗೆ ಸ್ಥಳ ಪರಿಶೀಲನೆ, ದಾಖಲೆಗಳ ಪರಿಶೀಲನೆ ಹಾಗೂ ಸಂಬಂಧಿಸಿದ ಇಲಾಖೆಯ ಅನುಮತಿ ಅಗತ್ಯವಿರುವ ಹಿನ್ನೆಲೆಯಲ್ಲಿ, ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಜನರ ಸಮಸ್ಯೆಗಳನ್ನು ಕೇವಲ ಅರ್ಜಿಯಾಗಿ ಪರಿಗಣಿಸದೆ, ಅವುಗಳ ಹಿಂದೆ ಇರುವ ವಾಸ್ತವಿಕ ಪರಿಸ್ಥಿತಿಯನ್ನು ಅರಿತು ಪರಿಹಾರ ಕಲ್ಪಿಸುವುದು ಜನ ಸಂಪರ್ಕ ಸಭೆಯ ಪ್ರಮುಖ ಉದ್ದೇಶವಾಗಿದೆ. ಈ ಮೂಲಕ ಆಡಳಿತ ಮತ್ತು ಸಾರ್ವಜನಿಕರ ನಡುವಿನ ನೇರ ಸಂಪರ್ಕ ಮತ್ತಷ್ಟು ಬಲಪಡಿಸುವ ಪ್ರಯತ್ನ ಮಾಡಲಾಗುತ್ತಿದೆ.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿತುನ್ ಎಚ್.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಜಿಲ್ಲಾ ಪಂಚಾಯಿತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ವೆಂಕಟೇಶ್ ಆಲ್ಕೋಡ ಮತ್ತು ತಂಡದವರು ನಾಡಗೀತೆ ಪ್ರಸ್ತುತ ಪಡಿಸಿದರು.
‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಘೋಷಣೆಯೊಂದಿಗೆ ಆರಂಭಗೊಂಡಿರುವ ಪ್ರಜಾ ಸೇವಾ ಅಭಿಯಾನವು ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಹೆಜ್ಜೆಯಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸುವುದರ ಜೊತೆಗೆ, ಪರಿಹಾರ ಪ್ರಕ್ರಿಯೆಯಲ್ಲಿಯೂ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಒದಗಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP