ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಸೇವೆಗಳ ಪರಿಶೀಲನೆ: ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸಲು ನಾಗಲಕ್ಷ್ಮಿ ಸೂಚನೆ
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳು, ಲಭ್ಯವಿರುವ ಮೂಲ
ಭೇಟಿ


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳು, ಲಭ್ಯವಿರುವ ಮೂಲಸೌಕರ್ಯ ಹಾಗೂ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ರೋಗಿಗಳು ಹಾಗೂ ಬಾಣಂತಿಯರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ವೈದ್ಯಕೀಯ ಸೇವೆಗಳಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಮತ್ತು ಅಗತ್ಯ ಸೇವೆಗಳು ದೊರೆಯುವಂತೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

ತಾಯಿ ಹಾಲಿನ ಬ್ಯಾಂಕ್ ವ್ಯವಸ್ಥೆಗೆ ಮೆಚ್ಚುಗೆ

ಆಸ್ಪತ್ರೆಯಲ್ಲಿರುವ ತಾಯಿ ಹಾಲಿನ ಬ್ಯಾಂಕ್ ಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ, ನವಜಾತ ಶಿಶುಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ತಾಯಿಯ ಹಾಲು ದೊರೆಯುವಂತೆ ಮಾಡುತ್ತಿರುವ ವ್ಯವಸ್ಥೆಯನ್ನು ಶ್ಲಾಘಿಸಿದರು.

ತಾಯಿಯ ಹಾಲು ಲಭ್ಯವಾಗದಂತಹ ಸಂದರ್ಭಗಳಲ್ಲಿ ನವಜಾತ ಶಿಶುಗಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಮಹತ್ವದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಇದರ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ನರ್ಸಿಂಗ್ ವಿದ್ಯಾರ್ಥಿಗಳ ಲಸಿಕಾಕರಣ ಪರಿಶೀಲನೆ

ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿರುವ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯ ಲಸಿಕಾಕರಣ ಆಗಿದೆಯೇ ಎಂಬುದನ್ನೂ ಅಧ್ಯಕ್ಷೆ ಪರಿಶೀಲಿಸಿದರು. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ತಕ್ಷಣವೇ ಅಗತ್ಯ ಲಸಿಕೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಆರೋಗ್ಯ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಲಸಿಕಾಕರಣ ಸೇರಿದಂತೆ ಅಗತ್ಯ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ನಿರ್ದೇಶನ ನೀಡಿದರು.

ಬಾಣಂತಿಯರಿಗೆ ಬಿಸಿ ಕುಡಿಯುವ ನೀರು ಕಲ್ಪಿಸಲು ಸೂಚನೆ

ಆಸ್ಪತ್ರೆಗೆ ದಾಖಲಾಗಿರುವ ಬಾಣಂತಿಯರಿಗೆ ಬಿಸಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಡಾ. ನಾಗಲಕ್ಷ್ಮಿ ಸೂಚಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯರಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಯಾವುದೇ ಕೊರತೆಯಿಲ್ಲದೆ ದೊರೆಯಬೇಕು. ವಿಶೇಷವಾಗಿ ಹೆರಿಗೆ ನಂತರದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಹೇಳಿದರು.

ಇದೇ ವೇಳೆ, ವೈದ್ಯಕೀಯ ಪರೀಕ್ಷೆಗಳಲ್ಲಿ ಆಗುತ್ತಿರುವ ವಿಳಂಬದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ರೋಗಿಗಳು ಅನಗತ್ಯವಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಡಿ ಗ್ರೂಪ್ ಕಾರ್ಮಿಕರ ಸಂಬಳ ಪಾವತಿ ಕುರಿತು ವರದಿ ಕೇಳಿದ ಆಯೋಗ

ಆಸ್ಪತ್ರೆಯ ಕಾರ್ಮಿಕರ ಸಂಬಳ ಪಾವತಿಯಲ್ಲಿ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಪಾವತಿಯಾಗುವಂತೆ ನೋಡಿಕೊಳ್ಳುವುದರ ಜೊತೆಗೆ, ಅವರಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ESI, PF ಹಾಗೂ ಇತರೆ ಕಾರ್ಮಿಕರ ಕಲ್ಯಾಣ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು ಎಂದು ಡಾ. ನಾಗಲಕ್ಷ್ಮಿ ಸ್ಪಷ್ಟಪಡಿಸಿದರು.

ಕಾರ್ಮಿಕರ ಹಕ್ಕುಗಳು ಹಾಗೂ ಕಲ್ಯಾಣ ಸೌಲಭ್ಯಗಳ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಸಂಬಂಧಿಸಿದ ಸಂಸ್ಥೆಗಳು ಮತ್ತು ಅಧಿಕಾರಿಗಳು ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

15 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಲು ಸೂಚನೆ

ಆಸ್ಪತ್ರೆಯಲ್ಲಿ ಪರಿಶೀಲನೆ ವೇಳೆ ಗಮನಕ್ಕೆ ಬಂದಿರುವ ಸಮಸ್ಯೆಗಳು ಹಾಗೂ ಅವುಗಳ ಪರಿಹಾರಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು 15 ದಿನಗಳೊಳಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗಕ್ಕೆ ಸಂಪೂರ್ಣ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಡಾ. ನಾಗಲಕ್ಷ್ಮಿ ಸೂಚಿಸಿದರು.

ಮಹಿಳೆಯರು, ಬಾಣಂತಿಯರು ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ದೊರೆಯುವಂತೆ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯಾವುದೇ ಲೋಪ ಕಂಡುಬಂದರೆ ಅದನ್ನು ತಕ್ಷಣವೇ ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande