
ನವದೆಹಲಿ, 06 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳು ಕೇವಲ ಒಂದು ಪರೀಕ್ಷೆ ಅಥವಾ ನೇಮಕಾತಿಗೆ ಸೀಮಿತವಾಗಿಲ್ಲ. ಇಡೀ ವ್ಯವಸ್ಥೆಯ ಮೇಲಿನ ನಂಬಿಕೆ ಕಳೆದುಕೊಂಡಿರುವುದರ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳ ವಿರುದ್ಧ ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪೇಪರ್ ಸೋರಿಕೆ, ಸ್ಥಗಿತಗೊಂಡಿರುವ ನೇಮಕಾತಿ ಪ್ರಕ್ರಿಯೆ, ಶಿಕ್ಷಣದ ಹೆಚ್ಚುತ್ತಿರುವ ವೆಚ್ಚ, ವಿದ್ಯಾರ್ಥಿ ನಿಲಯಗಳಲ್ಲಿನ ಅಮಾನವೀಯ ಪರಿಸ್ಥಿತಿ, ಕಳಪೆ ಆಹಾರ ಹಾಗೂ ನೇರ ಲಾಭ ವರ್ಗಾವಣೆ ಯೋಜನೆಯಲ್ಲಿ ನಡೆಯುತ್ತಿರುವ ವಂಚನೆ ಸೇರಿದಂತೆ ಹಲವು ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಲೋಕಸೇವಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಯ ವಿಶ್ವಾಸಾರ್ಹತೆಗೂ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿರುವ ಅವರು, ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಧ್ವನಿಯನ್ನು ಸರ್ಕಾರ ಆಲಿಸದಿದ್ದರೆ ನ್ಯಾಯ ಸಿಗುವವರೆಗೆ ಅವರ ಹೋರಾಟದ ಧ್ವನಿ ಮತ್ತಷ್ಟು ಪ್ರಬಲವಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.