ಕಲಬುರಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ: ಮಾಜಿ ಸಂಸದ ಡಾ. ಉಮೇಶ್ ಜಾಧವ್
ಸರ್ಕಾರದ ವಿರುದ್ಧ ಮಾಜಿ ಸಂಸದ ಡಾ. ಉಮೇಶ್ ಜಾಧವ್ ವಾಗ್ದಾಳಿ
kalaburagi-former-mp-umesh-jadhav-condemns-fir-against-bjp-leaders


ಕಲಬುರಗಿ, 06 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕಲಬುರಗಿ: ನಗರದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಬೈಕ್ ಸವಾರನ ಹೆಲ್ಮೆಟ್ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಮಾಜಿ ಸಂಸದ ಡಾ. ಉಮೇಶ್ ಜಾಧವ್ ತೀವ್ರವಾಗಿ ಖಂಡಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಮೂಲಕ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಮೂರು ವರ್ಷಗಳಲ್ಲಿ ಕಲಬುರಗಿಯಲ್ಲಿ ಇದುವರೆಗೆ ಎಷ್ಟು ಜನ ಅನುಮತಿ ಪಡೆದುಕೊಂಡು ಪ್ರತಿಭಟನೆ ನಡೆಸಿದ್ದಾರೆ? ಕೇವಲ ಅನುಮತಿ ಪಡೆಯಲಿಲ್ಲ ಎಂಬ ಕಾರಣಕ್ಕೆ ಎಫ್ಐಆರ್ ದಾಖಲಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರೋಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಸ್ಪಷ್ಟನೆ ನೀಡಿದ ಅವರು, ಪ್ರತಿಭಟನೆಯಲ್ಲಿ ನಡೆದ ಗಲಾಟೆಯ ಕೇವಲ 30 ಸೆಕೆಂಡ್ಗಳ ತುಣುಕು ಮಾತ್ರ ಹರಿದಾಡುತ್ತಿದೆ. ಸುಡು ಬಿಸಿಲಿನಲ್ಲಿ ಎರಡು ಗಂಟೆಗಳ ಕಾಲ ಸತತವಾಗಿ ಪ್ರತಿಭಟನೆ ನಡೆಸಿದಾಗ ಆಕ್ರೋಶಗೊಂಡು ಮಾತಿನ ಚಕಮಕಿ ನಡೆದಿರಬಹುದು ಎಂದರು. ಇದೇ ವೇಳೆ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದ ಅವರು, 2025ರಲ್ಲಿ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲಾಗಿತ್ತು, ಆಗ ಯಾರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು? ಕಾಂಗ್ರೆಸ್ ಸರ್ಕಾರವು ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣೆ ಸವರುವ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ರೈತರ ಪರವಾಗಿ ಹೋರಾಟ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆ ನಡೆಸಿದವರನ್ನು ಕರೆದು ಸೌಹಾರ್ದಯುತವಾಗಿ ಮಾತನಾಡಿಸುವ ಬದಲು, ಎಫ್ಐಆರ್ ಅಸ್ತ್ರ ಬಳಸಿ ಬೆದರಿಸುವ ತಂತ್ರಗಾರಿಕೆ ನಡೆಯುತ್ತಿದೆ ಎಂದು ದೂರಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande