
ಬೆಂಗಳೂರು, 07ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ನೈಸ್ ಸಂಸ್ಥೆಗೆ 1,453 ನಿವೇಶನಗಳನ್ನು ಹಂಚಿಕೆ ಮಾಡಲು ರಾಜ್ಯ ಸಚಿವ ಸಂಪುಟ ನೀಡಿರುವ ಅನುಮತಿಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀವ್ರವಾಗಿ ವಿರೋಧಿಸಿದ್ದಾರೆ. ಸಚಿವ ಸಂಪುಟದ ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪು ಹಾಗೂ ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿ ಮುಖ್ಯಮಂತ್ರಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ 4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ನೈಸ್ ಯೋಜನೆಗಾಗಿ ಜಮೀನು ಕಳೆದುಕೊಂಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ನೈಸ್ ಸಂಸ್ಥೆಗೆ ಅನುಮತಿ ನೀಡಲಾಗಿದೆ. ಈ ನಿರ್ಧಾರವನ್ನು ತಮ್ಮ ಪತ್ರದಲ್ಲಿ ದೇವೇಗೌಡರು ಕಟುವಾಗಿ ಖಂಡಿಸಿದ್ದಾರೆ.
1997ರ ಚೌಕಟ್ಟು ಒಪ್ಪಂದದ ಪ್ರಕಾರ ರಸ್ತೆ ಹಾಗೂ ಮೂಲಸೌಕರ್ಯ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನಲ್ಲಿ ವಾಣಿಜ್ಯ ಅಥವಾ ವಸತಿ ನಿವೇಶನಗಳನ್ನು ನಿರ್ಮಿಸಲು ಅವಕಾಶವಿಲ್ಲ ಎಂದು ಅವರು ತಿಳಿಸಿದ್ದಾರೆ. ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಯೋಜನೆಗೆ ಮೀಸಲಾದ ಜಮೀನನ್ನು ಬೇರೆ ಉದ್ದೇಶಕ್ಕೆ ಬಳಸುವುದು ಒಪ್ಪಂದದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ 2016ರಲ್ಲಿ ಸ್ವತಃ ಕಾಂಗ್ರೆಸ್ ಸರ್ಕಾರವೇ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು ಎಂಬುದನ್ನು ದೇವೇಗೌಡರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ವಿವಿಧ ತೀರ್ಪುಗಳಲ್ಲೂ ಇಂಟರ್ಚೇಂಜ್ ಪ್ರದೇಶಗಳಲ್ಲಿ ನಿವೇಶನ ನಿರ್ಮಾಣ ಮಾಡುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಾದಾವರ, ಕೆಂಗೇರಿ, ಕೊಮಘಟ್ಟ, ಸೋಂಪುರ ಮತ್ತು ಪಾಂತರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ಜಮೀನುಗಳು ನೈಸ್ ರಸ್ತೆ ಹಾಗೂ ಮೂಲಸೌಕರ್ಯ ವ್ಯಾಪ್ತಿಗೆ ಒಳಪಡುತ್ತವೆ. ಇಂತಹ ಜಮೀನಿನಲ್ಲಿ ನಿವೇಶನ ನಿರ್ಮಾಣಕ್ಕೆ ಅವಕಾಶ ನೀಡುವ ಮೂಲಕ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ತರಲಾಗುತ್ತಿದೆ ಎಂದು ದೇವೇಗೌಡರು ಆಕ್ಷೇಪಿಸಿದ್ದಾರೆ.
ಜುಲೈ 2026ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿರುವ ತೀರ್ಪನ್ನು ಉಲ್ಲೇಖಿಸಿರುವ ಅವರು, ನೈಸ್ ಸಂಸ್ಥೆಯು ಸಾರ್ವಜನಿಕ ಹಿತಾಸಕ್ತಿಯನ್ನು ಕಡೆಗಣಿಸಿ ವೈಯಕ್ತಿಕ ಲಾಭ ಪಡೆಯುವ ರೀತಿಯಲ್ಲಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.
ನೈಸ್ ಸಂಸ್ಥೆಯ ಹಣಕಾಸು ವ್ಯವಹಾರಗಳ ಕುರಿತು ಫೋರೆನ್ಸಿಕ್ ಆಡಿಟ್ ನಡೆಸಲು ನ್ಯಾಯಾಲಯ ಸೂಚಿಸಿರುವ ವಿಚಾರವನ್ನೂ ದೇವೇಗೌಡರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಸಂಸ್ಥೆಯ ಹಣಕಾಸು ವ್ಯವಹಾರಗಳ ಬಗ್ಗೆ ನ್ಯಾಯಾಲಯದ ಮುಂದೆ ಪರಿಶೀಲನೆ ನಡೆಯುತ್ತಿರುವ ಸಂದರ್ಭದಲ್ಲಿ, ಮತ್ತೆ ಸಂಸ್ಥೆಗೆ ಅನುಕೂಲವಾಗುವ ರೀತಿಯಲ್ಲಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
“ಈ ನಿರ್ಧಾರದಿಂದ ನಿಜವಾದ ಫಲಾನುಭವಿಗಳು ಸಂತ್ರಸ್ತ ರೈತರೋ ಅಥವಾ ನೈಸ್ ಸಂಸ್ಥೆ ಮತ್ತು ಅದರ ಹೂಡಿಕೆದಾರರೋ? ಸರ್ಕಾರದ ಸಂಪುಟದಲ್ಲೂ ಹೂಡಿಕೆದಾರರಿದ್ದಾರೆಯೇ?” ಎಂದು ದೇವೇಗೌಡರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅದಕ್ಕಾಗಿ ಕಾನೂನು ಮತ್ತು ನ್ಯಾಯಾಲಯಗಳ ಆದೇಶಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಕ್ರಮ ಕೈಗೊಳ್ಳಬಾರದು ಎಂದು ಅವರು ಒತ್ತಾಯಿಸಿದ್ದಾರೆ. ಸಚಿವ ಸಂಪುಟದ ನಿರ್ಧಾರವನ್ನು ಮರುಪರಿಶೀಲಿಸಿ, ಕಾನೂನುಬದ್ಧವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R