
ಬೆಂಗಳೂರು, 07ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಅವರಿಗೆ ಹೈಕೋರ್ಟ್ ತಾತ್ಕಾಲಿಕ ನಿರಾಳತೆ ನೀಡಿದೆ.
ಹೊಸನಗರದ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಪಾಕಿಸ್ತಾನ ಸೇನಾ ಮುಖ್ಯಸ್ಥನ ಫೋಟೋವನ್ನು ತಿರುಚಿ, ‘ಒನ್ ಅಜೆಂಡಾ’ ಎಂದು ಬರೆದು ರಾಹುಲ್ ಗಾಂಧಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2) ಅಡಿ ಪ್ರಕರಣ ದಾಖಲಿಸಿದ್ದರು.
ಎಫ್‌ಐಆರ್ ಹಾಗೂ ಕೆಳ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ಪ್ರಶ್ನಿಸಿ ರಾಜೇಶ್ ಹಿರಿಮನೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ನೇತೃತ್ವದ ತಂಡ ವಾದ ಮಂಡಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಕೆಳ ನ್ಯಾಯಾಲಯದ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R