
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವತಿಯಿಂದ ಬೃಹತ್ ಸಾರ್ವಜನಿಕ ಸಮಾವೇಶ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಕಾರ್ಯಕ್ರಮದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಸಂಘಟಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದಾದ್ಯಂತ ಎಲ್ಲೆಂದರಲ್ಲಿ ಬ್ಯಾನರ್, ಫ್ಲೆಕ್ಸ್ ಅಥವಾ ಕಟೌಟ್ಗಳನ್ನು ಅಳವಡಿಸುವಂತಿಲ್ಲ. ಕೇವಲ ಕಾರ್ಯಕ್ರಮ ನಿಗದಿಯಾಗಿರುವ ಮುನ್ಸಿಪಲ್ ಹೈಸ್ಕೂಲ್ ಮೈದಾನದ ಆವರಣದಲ್ಲಿ ಮಾತ್ರ ಬ್ಯಾನರ್ ಹಾಕಲು ಅನುಮತಿ ನೀಡಲಾಗಿದೆ.
ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗಬಾರದು. ಒಂದು ವೇಳೆ ನಷ್ಟ ಸಂಭವಿಸಿದರೆ ಸಂಘಟಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.
ಸಭೆಗೆ ಆಗಮಿಸುವ ಕಾರ್ಯಕರ್ತರ ವಾಹನಗಳಿಂದ ಸಾರ್ವಜನಿಕರ ದಿನನಿತ್ಯದ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು.
ನಿಗದಿತ ಡೆಸಿಬಲ್ ಮಿತಿಯೊಳಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬೇಕು ಹಾಗೂ ಅನುಮತಿಸಲಾದ ಸಮಯದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಿದೆ.
ಜಿಲ್ಲಾಡಳಿತ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್