ಬರಗಾಲ: ಪ್ರತಿ ಅರ್ಹ ಕುಟುಂಬಕ್ಕೂ ಕೆಲಸ ಕಲ್ಪಿಸಿ;ಪ್ರಕಾಶ ವಡ್ಡರ
ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವುದು ಅತ್ಯಂತ ಅಗತ್ಯವಾಗಿದ್ದು, ಕೆಲಸಕ್ಕಾಗಿ ಯಾವುದೇ ಕುಟುಂಬ ಗುಳೆ ಹೋಗದಂತೆ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇ
ಉದ್ಯೋಗ


ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಕಲ್ಪಿಸುವುದು ಅತ್ಯಂತ ಅಗತ್ಯವಾಗಿದ್ದು, ಕೆಲಸಕ್ಕಾಗಿ ಯಾವುದೇ ಕುಟುಂಬ ಗುಳೆ ಹೋಗದಂತೆ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಸಾಸನೂರ, ಮೂಕಿಹಾಳ, ಹಿರೂರ ಹಾಗೂ ಮಿಣಜಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಅವರು, ವಿಬಿ–ಜಿ ರಾಮ್–ಜಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಹಾಗೂ ಮಾನವ ದಿನಗಳ ಸೃಜನೆಯ ಪ್ರಗತಿಯನ್ನು ಸ್ಥಳ ಪರಿಶೀಲನೆ ಮೂಲಕ ವೀಕ್ಷಿಸಿದರು. ಕಾಮಗಾರಿಗಳ ಗುಣಮಟ್ಟ, ಕೂಲಿಕಾರರ ಹಾಜರಾತಿ, ಯೋಜನೆಯ ಅನುಷ್ಠಾನ ಹಾಗೂ ಅರ್ಹ ಕುಟುಂಬಗಳಿಗೆ ಉದ್ಯೋಗ ಒದಗಿಸಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಕೂಲಿಕಾರರೊಂದಿಗೆ ನೇರವಾಗಿ ಸಂವಾದ ನಡೆಸಿದ ಪ್ರಕಾಶ ವಡ್ಡರ ಅವರು, ಅವರ ಸಮಸ್ಯೆಗಳು ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಅವಕಾಶ ಕಲ್ಪಿಸುವಲ್ಲಿ ಕೂಲಿಕಾರರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದ ಅವರು, ಅವರ ಶ್ರಮವನ್ನು ಗೌರವಿಸಿ ಸನ್ಮಾನಿಸಿದರು.

ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಕಿಹಾಳ–ಶಿವಪೂರ ಗ್ರಾಮದಲ್ಲಿ ಕೂಲಿಕಾರರಿಗಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಪ್ರಕಾಶ ವಡ್ಡರ ಅವರು ಚಾಲನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಉದ್ಯೋಗದ ಜೊತೆಗೆ ಅವರ ಆರೋಗ್ಯ ರಕ್ಷಣೆಯೂ ಮಹತ್ವದ್ದಾಗಿದ್ದು, ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಅರ್ಜಿ ಸಲ್ಲಿಸಿದ ಅರ್ಹ ಕುಟುಂಬಗಳಿಗೆ ತಕ್ಷಣ ಉದ್ಯೋಗ

ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ಪ್ರತಿಯೊಂದು ಅರ್ಹ ಕುಟುಂಬಕ್ಕೂ ಕೆಲಸ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾನವ ದಿನಗಳನ್ನು ಸೃಜಿಸುವಂತೆ ನಿರ್ದೇಶನ ನೀಡಿದರು.

ಉದ್ಯೋಗದ ಅವಶ್ಯಕತೆ ಇರುವ ಕುಟುಂಬಗಳಿಗೆ ಯೋಜನೆಯ ಮಾಹಿತಿ ತಲುಪಿಸುವಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಇರಬಾರದು. ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ, ಸ್ವ-ಸಹಾಯ ಸಂಘಗಳ ಸಭೆಗಳ ಮೂಲಕ ಹಾಗೂ ಬಡ ಕುಟುಂಬಗಳ ಮಹಿಳೆಯರಿಗೆ ಯೋಜನೆಯ ಕುರಿತು ಮಾಹಿತಿ ನೀಡುವ ಮೂಲಕ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳು, ಕೆಲಸಕ್ಕೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ದೊರೆಯುವ ಸೌಲಭ್ಯಗಳ ಕುರಿತು ಗ್ರಾಮೀಣ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ವಿಶೇಷವಾಗಿ ಆರ್ಥಿಕವಾಗಿ ದುರ್ಬಲ ಕುಟುಂಬಗಳು ಮತ್ತು ಉದ್ಯೋಗದ ಅವಶ್ಯಕತೆ ಇರುವ ಮಹಿಳೆಯರು ಯೋಜನೆಯ ಸದುಪಯೋಗ ಪಡೆಯುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

‘ಉದ್ಯೋಗಕ್ಕಾಗಿ ಗುಳೆ ಬೇಡ, ಸ್ವಗ್ರಾಮದಲ್ಲೇ ಉದ್ಯೋಗ’

ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಕುಟುಂಬಗಳು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ಅಥವಾ ಬೇರೆ ಜಿಲ್ಲೆಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಹೀಗಾಗಿ “ಉದ್ಯೋಗಕ್ಕಾಗಿ ಗುಳೆ ಬೇಡ – ಸ್ವಗ್ರಾಮದಲ್ಲೇ ಉದ್ಯೋಗ” ಎಂಬ ಆಶಯದೊಂದಿಗೆ ವಿಬಿ–ಜಿ ರಾಮ್–ಜಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಗ್ರಾಮೀಣ ಜನರಿಗೆ ಕರೆ ನೀಡಿದರು.

ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಕಾಮಗಾರಿಗಳನ್ನು ಗುರುತಿಸಿ, ಅರ್ಹ ಕೂಲಿಕಾರರಿಗೆ ನಿರಂತರವಾಗಿ ಕೆಲಸ ದೊರೆಯುವಂತೆ ಕಾರ್ಯಯೋಜನೆ ರೂಪಿಸಬೇಕು. ಕಾಮಗಾರಿಗಳ ಪ್ರಗತಿ ಹಾಗೂ ಮಾನವ ದಿನಗಳ ಸೃಜನೆಯ ಕುರಿತು ನಿಯಮಿತವಾಗಿ ಪರಿಶೀಲನೆ ನಡೆಸಿ, ಅಗತ್ಯವಿರುವ ಕಡೆಗಳಲ್ಲಿ ವೇಗ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಳಿಕೋಟಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಅನುಸೂಯಾ ಚಲವಾದಿ, ಸಹಾಯಕ ನಿರ್ದೇಶಕರು (ಗ್ರಾ.ಉ.) ಪಿ.ಎಸ್. ಕಸನಕ್ಕಿ, ಹಿರೂರ ಪಿಡಿಓ ಸವಿತಾ ಗದಗ, ಪಿಡಿಓ ಪಿ.ಎಸ್. ಗಾಣಿಗೇರ, ತಾಂತ್ರಿಕ ಸಂಯೋಜಕ ಮಹಾಂತೇಶ ಕಿಲಾರಟ್ಟಿ, ಐಇಸಿ ಸಂಯೋಜಕ ಮಲಕಪ್ಪ, ತಾಂತ್ರಿಕ ಸಹಾಯಕರಾದ ಮಹಾಂತೇಶ ಪಾಟೀಲ ಹಾಗೂ ಅನ್ನಾನ ಅಹಮ್ಮದ್, ವಿವಿಧ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಡಿಇಓ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande