ಮುದ್ದೇಬಿಹಾಳ–ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ
ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕ ಹಾಗೂ ತಾಳಿಕೋಟಿ ತಾಲೂಕು ಘಟಕದ ವತಿಯಿಂದ ನಡೆಯುತ್ತಿರುವ ಸತ್ಯಾಗ್ರಹ ಸ್ಥ
ಧರಣಿ


ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕ ಹಾಗೂ ತಾಳಿಕೋಟಿ ತಾಲೂಕು ಘಟಕದ ವತಿಯಿಂದ ನಡೆಯುತ್ತಿರುವ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಅಪ್ಪಾಜಿಗೌಡ ನಾಡಗೌಡ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮ ಹಾಗೂ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳು ಸೇರ್ಪಡೆಯಾಗದಿರುವುದರಿಂದ ರೈತರಿಗೆ ಆಗಬಹುದಾದ ತೊಂದರೆಗಳ ಕುರಿತು ಸತ್ಯಾಗ್ರಹ ನಿರತ ರೈತರಿಂದ ಮಾಹಿತಿ ಪಡೆದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎರಡೂ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಶಾಸಕ ಅಪ್ಪಾಜಿಗೌಡ ನಾಡಗೌಡ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರೊಂದಿಗೆ ಈ ಕುರಿತು ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು.

ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳ ರೈತರ ಹಿತದೃಷ್ಟಿಯಿಂದ ಬರಪೀಡಿತ ಪಟ್ಟಿಯಲ್ಲಿ ಈ ತಾಲೂಕುಗಳನ್ನು ಸೇರಿಸುವ ಅಗತ್ಯವಿದೆ ಎಂಬುದನ್ನು ಸರ್ಕಾರದ ಗಮನಕ್ಕೆ ತಂದಿದ್ದು, ಮುಂದಿನ ಹಂತದಲ್ಲಿ ಪ್ರಕಟಿಸುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳನ್ನು ಸೇರ್ಪಡೆಗೊಳಿಸುವುದಾಗಿ ಸರ್ಕಾರದ ಮಟ್ಟದಲ್ಲಿ ಆಶ್ವಾಸನೆ ನೀಡಲಾಗಿದೆ ಎಂದು ನಾಡಗೌಡ ಹೇಳಿದರು.

ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರ, ಬರ ನಿರ್ವಹಣಾ ಕ್ರಮಗಳು ಹಾಗೂ ಅಗತ್ಯ ನೆರವುಗಳು ತಲುಪುವಂತೆ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ. ರೈತರ ಸಮಸ್ಯೆಗಳನ್ನು ಕೇವಲ ರಾಜಕೀಯ ವಿಚಾರವಾಗಿ ನೋಡದೆ, ಅನ್ನದಾತರ ಬದುಕಿನ ಪ್ರಶ್ನೆಯಾಗಿ ಪರಿಗಣಿಸಬೇಕು. ರೈತರ ಕಷ್ಟಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

“ಮೊದಲಿನಿಂದಲೂ ನಮ್ಮ ಕ್ಷೇತ್ರದ ಎಲ್ಲ ರೈತರ ಹಿತಕ್ಕಾಗಿ, ಅವರ ಕಷ್ಟಗಳಿಗೆ ಹೆಗಲಾಗಿ ನಿಲ್ಲುತ್ತಾ ಬಂದಿದ್ದೇನೆ. ಈಗಲೂ, ಮುಂದೆಯೂ ಅನ್ನದಾತರ ಹಿತಕ್ಕಾಗಿ ಅವರೊಂದಿಗೆ ನಿಲ್ಲುತ್ತೇನೆ. ರೈತರ ನ್ಯಾಯಯುತ ಬೇಡಿಕೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದ್ದು, ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನಗಳನ್ನು ಮುಂದುವರಿಸುತ್ತೇನೆ” ಎಂದು ಶಾಸಕ ಅಪ್ಪಾಜಿಗೌಡ ನಾಡಗೌಡ ಭರವಸೆ ನೀಡಿದರು.

ಸತ್ಯಾಗ್ರಹ ನಡೆಸುತ್ತಿರುವ ರೈತರು ಹಾಗೂ ರೈತ ಸಂಘಟನೆಗಳ ಮುಖಂಡರು ತಮ್ಮ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಪರಿಹಾರ ಮತ್ತು ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande