ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಪಂಚಮಸಾಲಿಗರಿಗೆ ಮೀಸಲಾತಿ
ಬೆಂಗಳೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗೃಹ ಕಚೇ
ಮುಖ್ಯಮಂತ್ರಿ


ಬೆಂಗಳೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದರು.

ಈ ವೇಳೆ ಮುಖ್ಯಮಂತ್ರಿ , ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುದು ಸರ್ಕಾರದ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತ್ತು. 3ಎನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು, 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande