ಕೊಪ್ಪಳ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕುವೆಂಪು ವಿಶ್ವ ಚೇತನರಾಗಿದ್ದು, ಅವರನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು. ಈ ಮಹನೀಯರು ಸಮಾಜದ ಎಲ್ಲರ ಒಳಿತನ್ನೇ ಬಯಸಿದ್ದರು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಮತ್ತು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಂಬಂಧ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಇದೇ ಡಿ. 30 ರಂದು ವಿಶ್ವಮಾನವ ದಿನಾಚರಣೆಯನ್ನು ಹಾಗೂ 2025ರ ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.
ವಿಶ್ವಮಾನವ ದಿನಾಚರಣೆ: ವಿಶ್ವಮಾನವ ದಿನಾಚರಣೆಯನ್ನಾಗಿ ಆಚರಿಸಲಾಗುವ ರಾಷ್ಟ್ರ ಕವಿ ಕುವೆಂಪುರವರ ಜನ್ಮದಿನ ಆಚರಣೆಯನ್ನು ಡಿ. 29ರಂದು ಭಾನುವಾರ ಬರುವ ಕಾರಣ ಅದರ ಬದಲಿಗೆ ಡಿ. 30 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸಾಹಿತ್ಯ ಭನವದಲ್ಲಿ ಆಚರಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ನಡೆಯುವ ವೇದಿಕೆ ಸಮಾರಂಭದಲ್ಲಿ ರಾಷ್ಟ್ರ ಕವಿ ಕುವೆಂಪುರವರ ಭಾವಚಿತ್ರಕ್ಕೆ ಪೂಜೆ ನಂತರ ಕುವೆಂಪು ಅವರ ರಚಿತ ಗೀತೆಗಳಿಗೆ ವಿವಿಧ ಶಾಲಾ ಮಕ್ಕಳಿಂದ ನೃತ್ಯ ರೂಪಕ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ: ಜನವರಿ 1 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ವೇದಿಕೆ ಸಮಾರಂಭವನ್ನು ಕೊಪ್ಪಳ ನಗರದ ಸಾಹಿತ್ಯ ಭನವದಲ್ಲಿ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಪೂಜೆ, ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ವಿಶ್ವಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಆಚರಿಸುವಂತಾಗಬೇಕು. ಸಮಾರಂಭಗಳ ದಿನದಂದು, ಸ್ವಚ್ಛತೆಗೆ ಕ್ರಮ ವಹಿಸಿ. ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾದಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಹಿತಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ನಾಗರಾಜ್, ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ ಹಾಗೂ ಪುಷ್ಪಲತಾ ಏಳುಬಾವಿ, ಗಣ್ಯರಾದ ಮಹಾಂತೇಶ ಕೊತಬಾಳ, ಬಸವರಾಜ ಶೀಲವಂತರ, ಶಿವಪ್ಪ ಹಡಪದ, ವಿಶ್ವಕರ್ಮ ಸಮುದಾಯದ ಮುಖಂಡರಾದ ಈಶಪ್ಪ ಬಡಿಗೇರ, ರುದ್ರಪ್ಪ ಬಡಿಗೇರ, ಉಮೇಶ ಪತ್ತಾರ, ಶೇಖರಪ್ಪ ಬಡಿಗೇರ, ದೇವೇಂದ್ರಪ್ಪ ರಾಜೂರು, ಬ್ರಹ್ಮಾನಂದ ಬಡಿಗೇರ ಹಾಗೂ ಮುಂತಾದವರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್