ಕೋಲಾರ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕವಾಗಿ ಕೆಲಸ ಮಾಡುವಾಗ ಎಲ್ಲಾ ಇಲಾಖೆಗಳ ಸಹಕಾರ, ಸಮನ್ವಯತೆ ಅಗತ್ಯ. ಸಹಕಾರ ಸಮನ್ವಯತೆ ಇಲ್ಲದೆ ಕೆಲಸ ಮಾಡಲು ಸಾಧ್ಯವಿಲ್ಲ. ಇದಕ್ಕಾಗಿ ವಿವಿಧ ಇಲಾಖಾ ಅಧಿಕಾರಿಗಳು ಪರಸ್ಪರ ಸಹಕಾರ ಸಮನ್ವಯದಿಂದ ಕಾರ್ಯ ನಿರ್ವಹಿಸಿ. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವಂತೆ ನೂತನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋಲಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಿ ಮಾತನಾಡುತ್ತಿದ್ದರು.
ಸಭೆಯಲ್ಲಿ ಜಿಲ್ಲೆಯ ಇಲಾಖೆಗಳಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಯೋಜನೆಗಳು ಮತ್ತು ಸರ್ಕಾರದ ಯೋಜನೆಗಳ ಕಾರ್ಯವೈಖರಿ ಮತ್ತು ಪ್ರಗತಿಯ ಸಮಗ್ರ ಪರಿಶೀಲನೆ ನಡೆಸಿದರು.
ಇಲಾಖೆವಾರು ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಅವರು ಮಾತನಾಡಿದರು. ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯದಿಂದ ಕೆಲಸ ಮಾಡಿ ನಂಬಿಕೆ, ವಿಶ್ವಾಸ ಗಳಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಇಲಾಖೆವಾರು ಸಭೆ ಹಾಗೂ ಸಮಸ್ಯೆಗಳ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್, ಮುಖ್ಯ ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ, ಕೃಷಿ ಜಂಟಿ ನಿರ್ದೇಶಕರು ಸುಮಾ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್. ನಾರಾಯಣ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಶ್ರೀನಿವಾಸ್ ಕೈಗಾರಿಕೆ ಜಂಟಿ ನಿರ್ದೇಶಕರು ನಾಗೇಶ್ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ