ಬಳ್ಳಾರಿ, 15 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಗೋವುಗಳ ಕೆಚ್ವಲು ಕೊಯ್ದಿರುವ ಎಲ್ಲಾ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಮತ್ತು ಚಾಮರಾಜಪೇಟೆ ಕ್ಷೇತ್ರದ ಶಾಸಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕ ಗಡಿಗೆ ಚನ್ನಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.
ಬಳ್ಳಾರಿ ಜಿಲ್ಲಾ ರೈತ ಮೋಚಾ ಅಧ್ಯಕ್ಷ ಗಣಪಾಲ್ ಐನಾತರೆಡ್ಡಿ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಚಾಮರಾಜಪೇಟೆ ಕ್ಷೇತ್ರದ ಶಾಸಕ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಈ ಘಟನೆಗೆ ಕಾರಣವಾಗಿದ್ದು, ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿಫಲವಾಗಿರುವ ಅವರು ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸಂಪೂರ್ಣ ಮರೆತಿದ್ದಾರೆ ಎಂದು ಆರೋಪಿಸಿದರು.
ಗೋವುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ ಒಬ್ಬರನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅನೇಕರು ಪಾಲ್ಗೊಂಡಿದ್ದು, ಪೊಲೀಸರು ತಕ್ಷಣವೇ ಎಲ್ಲಾ ಆರೋಪಿಗಳನ್ನು ಪತ್ತೆ ಮಾಡಿ, ಬಂಧಿಸಿ ಕಠಿಣ ಕಾಯ್ದೆಗಳ ಅಡಿಯಲ್ಲಿ ಶಿಕ್ಷಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಎಚ್. ಹನುಮಂತಪ್ಪ, ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್