ಯಾದಗಿರಿ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.
ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ' ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು.
ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa