ಸಿಲಿಗುರಿ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಹಾಗೂ ಉತ್ತರ ಬಂಗಾಳದ ಪರ್ವತ ಪ್ರದೇಶಗಳಲ್ಲಿ ಕಳೆದ 12 ಗಂಟೆಗಳಲ್ಲಿ 261 ಮಿಮೀ ಮಳೆ ಸುರಿದು ಭಾರಿ ಭೂಕುಸಿತ ಉಂಟಾಗಿದೆ. ಈ ದುರಂತದಲ್ಲಿ ಇದುವರೆಗೂ 20 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಪ್ರವಾಸಿಗರು ಹಲವಾರು ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ.
ಮಿರಿಕ್ ಮತ್ತು ಸುಖಿಯಾಪೋಖರಿ ಪ್ರದೇಶಗಳಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, ಮನೆಗಳು ಹಾಗೂ ರಸ್ತೆಗಳು ಕೊಚ್ಚಿ ಹೋಗಿವೆ. ದುಧಿಯಾ ಸೇತುವೆ ಕುಸಿತದಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸಿಲಿಗುರಿ–ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಸಿಕ್ಕಿಂ ನಡುವಿನ ರಾಷ್ಟ್ರೀಯ ಹೆದ್ದಾರಿ 10 ಹಾಗೂ 55 ಮುಚ್ಚಲ್ಪಟ್ಟಿವೆ.
ಸ್ಥಳದಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಸೇನೆ ಮತ್ತು ಸ್ಥಳೀಯ ಪೊಲೀಸರು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ. ಆದರೆ ನಿರಂತರ ಮಳೆಯಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ತೀಸ್ತಾ ನದಿ ಉಕ್ಕಿ ಹರಿಯುತ್ತಿದ್ದು, ಹತ್ತಿರದ ಗ್ರಾಮಗಳ ಜನರನ್ನು ಎತ್ತರ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೆಳಗ್ಗಿನಿಂದ ನಬನ್ನಾದ ನಿಯಂತ್ರಣ ಕೊಠಡಿಯಿಂದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಇಂದು ಮಧ್ಯಾಹ್ನ ಉತ್ತರ ಬಂಗಾಳ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa