
ವಿಜಯಪುರ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ತಾರತಮ್ಯ ತೊಡೆದು ಹಾಕಿ, ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ಶ್ರೀಮತಿ ಬಂಗಾರಮ್ಮ ಸಜ್ಜನ, ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಸೋಮವಾರ ಬಿ.ಎಲ್.ಡಿ.ಇ ಸಂಸ್ಥೆ ಶ್ರೀಮತಿ ಬಂಗಾರಮ್ಮ ಸಜ್ಜನ, ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ-2025ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜಕ್ಕೆ ಅತಿ ದೊಡ್ಡ ಪಿಡುಗಾದ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಹಾಗೂ ಬಾಲ್ಯ ವಿವಾಹ ಪದ್ಧತಿಯಂತಹ ಅನಿಷ್ಟ ಪದ್ಧತಿಯನ್ನು ತಡೆಗಟ್ಟಬೇಕು. ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದಿದ್ದು, ತಮ್ಮದೇಯಾದ ಕೊಡುಗೆ ನೀಡುತ್ತಿದ್ದಾರೆ. ಸಾರ್ವಜನಿಕರು ಕೂಡಾ ತಮ್ಮ ಸಮಾಜಮುಖಿ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಿದಲ್ಲಿ ಎಲ್ಲರೂ ಒಗ್ಗೂಡಿ ಲಿಂಗ ತಾರತಮ್ಯವನ್ನು ಹೊಡೆದೋಡಿಸಬಹುದು ಎಂದು ಅವರು ಹೇಳಿದರು.
ಮಹಿಳಾ ಪೋಲಿಸ್ ಸ್ಟೇಷನ್‌ನ ಸಬ್ ಇನಸ್ಪೆಕ್ಟರ್ ಆರ್.ಎ.ದಿನ್ನಿ ವಿಶೇಷ ಉಪನ್ಯಾಸ ನೀಡಿ ಆಧುನಿಕ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಿದೆ ಜಾಲತಾಣಗಳಲ್ಲಿ ಅಪರಿಚಿತ ವ್ಯಕ್ತಿಗಳು ನೀಡುವ ಆಸೆ ಅಮೀಸೆಗೆ ಒಳಗಾಗಿ ತಮ್ಮ ಭವಿಷ್ಯಕ್ಕೆ ಕುತ್ತು ತರುತ್ತಿದ್ದಾರೆ. ಗುರು-ಹಿರಿಯರ ಮಾರ್ಗದರ್ಶದಲ್ಲಿ ತಮ್ಮ ಜೀವನವು ರೂಪಿಸಿಕೊಂಡು ಸಾಧನೆ ಮಾಡಬೇಕು. ಮಹಿಳೆಯರು ತಮ್ಮಕುಂದುಕೊರತೆಯಿದ್ದಲ್ಲಿ,ಮಹಿಳಾ ಪೋಲಿಸ್ ಠಾಣೆಗೆ ಭೇಟಿ ನೀಡಿ, ಅಥವಾ ಸಹಾಯವಾಣಿ ಸಂಖ್ಯೆ112 ಕರೆ ಮಾಡಿ ದಾಖಲಿಸಬಹುದಾಗಿದೆ ಎಂದು ಅವರು ತಿಳಿಸಿದರು.
ತಾಳಿಕೋಟೆಯ ವಿ.ವಿ.ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಜ್ಯೋತಿ ಹಿರೇಮಠ ಮಾತನಾಡಿ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯ ಗುರಿ, ಉದ್ದೇಶ ಮತ್ತು ಹಿನ್ನೆಲೆಯ ಕುರಿತು ವಿದ್ಯಾರ್ಥಿನಿಯರಿಗೆ ಸಮಗ್ರ ಮಾಹಿತಿ ನೀಡಿ, ವಿದ್ಯಾರ್ಥಿನಿಯರು ತಮಗಿರುವ ಅವಕಾಶಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಿಷನ್ ಶಕ್ತಿ ಸಂಯೋಜಕರಾದ ಭಾರತಿ ಪಾಟೀಲ ಅವರು ಬಾಲ್ಯ ವಿವಾಹ ನಿಷೇಧ ಮತ್ತು ದತ್ತು ಮಕ್ಕಳ ಮಾಸಾಚರಣೆ ಕುರಿತು ಹಾಗೂ ಮೇಲ್ವಿಚಾರಕಿ ಶಿಲ್ಪಾ ನಾಯಕ ಇವರು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಲೋಗೋ, ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ವೈ ತಮ್ಮಣ್ಣ, ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಮ್ಯಾಗೇರಿ, ಬಸವರಾಜ ಜಿಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande