
ಬೆಂಗಳೂರು, 30 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಚಿತ್ರರಂಗದ ಹಿರಿಯ ನಟ, ಜನಪ್ರಿಯ ಹಾಸ್ಯ ಕಲಾವಿದ ಎಂ.ಎಸ್. ಉಮೇಶ್ (79) ಅವರು ಕ್ಯಾನ್ಸರ್ ಸಮಸ್ಯೆಯಿಂದ ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ದಿನಗಳ ಹಿಂದೆ ಮನೆಯಲ್ಲಿ ಜಾರಿ ಬಿದ್ದು ಕಾಲು ಹಾಗೂ ಸೊಂಟಕ್ಕೆ ಪೆಟ್ಟು ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಾಗುತ್ತಿರುವ ವೇಳೆ ಲಿವರ್ ಕ್ಯಾನ್ಸರ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಇದೇ ವೇಳೆಯಲ್ಲಿ ನಡೆಯುತ್ತಿದ್ದ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆ ನಡುವೆ ಅವರ ಆರೋಗ್ಯ ಹದಗೆಟ್ಟು ಅಂತಿಮ ಉಸಿರೆಳೆದಿದ್ದಾರೆ.
1945ರ ಏಪ್ರಿಲ್ 22ರಂದು ಮೈಸೂರಿನಲ್ಲಿ ಜನಿಸಿದ ಉಮೇಶ್ ಅವರು ವೃತ್ತಿ ರಂಗಭೂಮಿಯಿಂದ ಚಲನಚಿತ್ರರಂಗದವರೆಗೆ ತಮದೇ ಆದ ಶೈಲಿಯಲ್ಲಿ ಪ್ರೇಕ್ಷಕರ ಮನಸೂರೆಗೊಂಡಿದ್ದರು. ಐದು ದಶಕಗಳ ಕಾಲ ಚಿತ್ರರಂಗದಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದರು.
ಉಮೇಶ್ ಅವರು ಅಭಿನಯಿಸಿದ ಮುನಿತಾಯಿ ಚಿತ್ರದ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ ಲಭಿಸಿತ್ತು. ಇದೇ ರೀತಿ 1994 ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997 ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ, ಆತ್ಮಚರಿತ್ರೆ ಬಣ್ಣದ ಘಂಟೆಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಉಮೇಶ ಅವರಿಗೆ ಸಂದಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa