
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಭಾನುವಾರ ಸಂಜೆ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆಯುಸಿರೆಳೆದರು.
ಭಾರತದಲ್ಲೇ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿಂದೆ ಅವರ ಆರೋಗ್ಯ ಕುರಿತು ವದಂತಿಗಳು ಹರಡಿದ್ದ ಸಂದರ್ಭದಲ್ಲಿ ಪುತ್ರ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಪ್ರತಿಕ್ರಿಯಿಸಿ, ತಂದೆಯ ಆರೋಗ್ಯ ಸ್ಥಿರವಾಗಿದ್ದು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿಸಿದ್ದರು. ಆದರೆ ದುರದೃಷ್ಟವಶಾತ್ ಇಂದು ಅವರು ಅಗಲಿದ್ದಾರೆ.
ನಾಯಕನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದಾವಣಗೆರೆಯ ಎಂಸಿಸಿ ಎ ಬ್ಲಾಕ್‌ನಲ್ಲಿರುವ ಶಾಮನೂರು ಶಿವಶಂಕರಪ್ಪ ಅವರ ನಿವಾಸದತ್ತ ದೌಡಾಯಿಸಿದ್ದಾರೆ.
ಜೂನ್ 16, 1931ರಂದು ದಾವಣಗೆರೆಯಲ್ಲಿ ಜನಿಸಿದ ಶಾಮನೂರು ಶಿವಶಂಕರಪ್ಪ ಅವರು ಸಾಮಾನ್ಯ ಕುಟುಂಬದಿಂದ ಬಂದವರಾಗಿದ್ದು, ರಾಜಕೀಯ, ಶಿಕ್ಷಣ, ಉದ್ಯಮ ಹಾಗೂ ಸಮಾಜಸೇವೆಯಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಅವರು ಆರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಅಲ್ಲದೆ, ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್, ದಾವಣಗೆರೆ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೇರಿದಂತೆ ಹಲವು ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ.
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa