ಬೆಳಗಾವಿ ಅಧಿವೇಶನ ನಾಳೆಗೆ ಮುಂದೂಡಿಕೆ
ಬೆಳಗಾವಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರವಿವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶ
Session


ಬೆಳಗಾವಿ, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರವಿವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ಕಲಾಪ ಆರಂಭವಾಗುತ್ತಿದ್ದಂತೆ ಸಭೆಯು ಮೌನಾಚರಣೆ ಮೂಲಕ ಶಾಮನೂರು ಶಿವಶಂಕರಪ್ಪ ಅವರ ಸ್ಮರಣೆಗೆ ಗೌರವ ಸಲ್ಲಿಸಿತು.

ಸಂತಾಪ ಸೂಚಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಅಪಾರ ಎಂದು ಹೇಳಿದರು. 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿದ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಮ್ಮೆ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದೀರ್ಘಕಾಲ ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಎಐಸಿಸಿ ಖಜಾಂಚಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿದರು.

1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಶಾಮನೂರು ಶಿವಶಂಕರಪ್ಪ, ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯ ಬಾಪೂಜಿ ವಿದ್ಯಾ ಸಂಸ್ಥೆಗಳ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಜಿಲ್ಲೆಯನ್ನು ವಿದ್ಯಾಕೇಂದ್ರವನ್ನಾಗಿ ರೂಪಿಸಿದವರು ಎಂದು ಮುಖ್ಯಮಂತ್ರಿ ಪ್ರಶಂಸಿಸಿದರು.

ಜವಳಿ ಕ್ಷೇತ್ರ ಕುಸಿತದ ಹಂತದಲ್ಲಿದ್ದಾಗ ದಾವಣಗೆರೆಗೆ ಹೊಸ ಬ್ರಾಂಡ್ ಗುರುತು ತಂದ ಶ್ರೇಯಸ್ಸು ಶಾಮನೂರು ಶಿವಶಂಕರಪ್ಪ ಅವರಿಗೆ ಸಲ್ಲುತ್ತದೆ. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು, ಎಲ್ಲರೊಂದಿಗೆ ಸ್ನೇಹಪೂರ್ಣ ಸಂಬಂಧ ಹೊಂದಿದ್ದ ಕಾರಣ ‘ಅಜಾತಶತ್ರು’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಮುಖ್ಯಮಂತ್ರಿ ಹೇಳಿದರು.

ಸಂತಾಪ ಸೂಚನೆಯ ನಂತರ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧಾನ ಸಭೆ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು. ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆಯಲು ಸಭಾಧ್ಯಕ್ಷ ಯು.ಟಿ. ಖಾದರ್ ಸೇರಿದಂತೆ ಬೆಳಗಾವಿಯಿಂದ ಹಲವು ಸಚಿವರು ಹಾಗೂ ಶಾಸಕರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande