
ಬೆಂಗಳೂರು, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ ಅವರಿಗೆ ಸಂಬಂಧಿಸಿದ ಸುಮಾರು ₹8 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಇಡಿ ನೀಡಿರುವ ಪತ್ರಿಕಾ ಪ್ರಕಟಣೆ ಪ್ರಕಾರ, ನಾಲ್ಕು ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಮತ್ತು ಒಂದು ಕಟ್ಟಡ ಸೇರಿ ಒಟ್ಟು ಐದು ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿಧಿಗಳ ಅಡಿಯಲ್ಲಿ ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಆಸ್ತಿಗಳ ಒಟ್ಟು ಮೌಲ್ಯ ₹8.07 ಕೋಟಿ ಆಗಿದೆ.
ಈ ಆಸ್ತಿಗಳನ್ನು ‘ಅಪರಾಧದ ಆದಾಯ’ ಎಂದು ಗುರುತಿಸಿರುವ ಇಡಿ, ಉಳಿದ ಅಪರಾಧ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಆ ಹಣವನ್ನು ಬಿ. ನಾಗೇಂದ್ರ ಈಗಾಗಲೇ ಖರ್ಚು ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದೆ.
ಇಡಿ ತನಿಖೆಯ ಪ್ರಕಾರ, ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ಬೇರೆಡೆಗೆ ತಿರುಗಿಸಿ, ನಕಲಿ ಖಾತೆಗಳ ಮೂಲಕ ವರ್ಗಾವಣೆ ಮಾಡಲಾಗಿದೆ. ಬಳಿಕ ಶೆಲ್ ಕಂಪನಿಗಳು ಹಾಗೂ ಘಟಕಗಳ ಮೂಲಕ ಅಕ್ರಮ ಹಣ ಹರಿವಿನ ಜಾಲ ನಿರ್ಮಿಸಲಾಗಿದೆ ಎಂಬ ಆರೋಪಗಳಿವೆ. ಈ ಸಂಬಂಧ ಕರ್ನಾಟಕ ಪೊಲೀಸರು ಹಾಗೂ ಸಿಬಿಐ ಪ್ರತ್ಯೇಕವಾಗಿ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಅದರ ಮುಂದುವರಿದ ತನಿಖೆಯಲ್ಲೇ ಹಣ ಅಕ್ರಮ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಮುಂದುವರಿದಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa