
ವಿಜಯಪುರ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅನಾವರಣ, ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಗೆ ಚಾಲನೆ, ಪಾಲಿಕೆಯ 150 ಕೋಟಿ ರೂ. ಅಭಿವೃದ್ದಿ ಕಾಮಗಾರಿಗಳ ಚಾಲನೆಗೆ ಜ.9ರಂದು ಜಿಲ್ಲೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದರು.
ರವಿವಾರ ನಗರದ ಆಶ್ರಮ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಗರದ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರ ಚೆನ್ನಮ್ಮ ಬಸ್ ನಿಲ್ದಾಣ ನಾಮಕರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಸೇರಿದಂತೆ ವಿವಿಧ ಸಚಿವ ಸಂಪುಟ ಸಹೋದ್ಯೋಗಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ,ಶೌರ್ಯ ಸಾಹಸ ಮತ್ತು ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಅವರ ವ್ಯಕ್ತಿತ್ವ- ಆದರ್ಶ, ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಮೂರ್ತಿ ಅನಾವರಣ ಮಾಡುವ ಮೂಲಕ ಗೌರವ ಸಲ್ಲಿಸಲಾಗುತ್ತಿದೆ. ಅದರಂತೆ ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರನ್ನು ಪ್ರೋತ್ಸಾಹಿಸಲು ನಿರ್ಮಿಸಲಾದ, ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳ ಬಹುದಿನಗಳ ಕನಸಾಗಿದ್ದ, ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ಅಂದು ನೆರವೇರಲಿದೆ ಎಂದು ಅವರು ತಿಳಿಸಿದರು.
ಅಂದು ಮುಖ್ಯ ವೇದಿಕೆ ಕಾರ್ಯಕ್ರಮ ನಗರದ ಆಶ್ರಮ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಜಿಲ್ಲಾಡಳಿತ ಭವನದ ಕಾಮಗಾರಿ ಹಾಗೂ ಪಾಲಿಕೆಯ 150 ಕೊಟಿ ರೂ. ಯೋಜನೆಗೆ ಚಾಲನೆ ನೀಡಲಿದ್ದು, ಇದರೊಂದಿಗೆ ಜಿಲ್ಲೆಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ- ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದೊಂದು ವೈಭವದ-ಭವ್ಯವಾದ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾಡಿನ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಆ ಮೂಲಕ ಗೌರವ ಸಲ್ಲಿಸುವ ಕಾರ್ಯ ನಮ್ಮ ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು. ಎಲ್ಲರೂ ಕೂಡಿ ವೈಭವದಿಂದ ಹಾಗೂ ಅತ್ಯಂತ ವಿಜೃಂಭಣೆಯಿಂದ ಕಾರ್ಯಕ್ರಮವನ್ನು ಆಯೋಜಿಸೋಣ ಎಂದು ಹೇಳಿದರು.
2013-18ರ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಹಿರಿಯರ ಆಶಯದಂತೆ 40-60 ಜಾಗೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗೆ ಅಂದಿನ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಕೂಡಲಸಂಗಮ ಸ್ವಾಮೀಜಿ ಜಯಮೃತ್ಯುಂಜಯ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಈ ಮೂರ್ತಿ ಉದ್ಘಾಟನೆ ಭಾಗ್ಯವು ನಮ್ಮ ಸರ್ಕಾರಕ್ಕೆ ದೊರೆತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಅವರು, ಬಸ್ ನಿಲ್ದಾಣವನ್ನು ವೀರ ರಾಣಿ ಕಿತ್ತೂರ ಚೆನ್ನಮ್ಮ ನಾಮಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಸಿದಾಗ ಮುಖ್ಯಮಂತ್ರಿಗಳಾದಿಯಾಗಿ ಸಾರಿಗೆ ಸಚಿವರು, ಒಪ್ಪಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆÉ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್.ಕರಡಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕೆಕೆಆರ್‍ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande