
ಹುಬ್ಬಳ್ಳಿ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್. ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿ ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿ ಹುಬ್ಬಳ್ಳಿಯ ಗಾಮನಗಟ್ಟಿ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ಥಳ ಪರಿಶೀಲನೆ ಮಾಡಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆಯನ್ನು ಸೆರೆಹಿಡಿಯಲು ಈಗಾಗಲೇ ಬೋನ್ ಅನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಚಿರತೆಯ ಚಲನವಲನವನ್ನು ಗುರುತಿಸಿ ಸರೆಹಿಡಿಯಲು ಕ್ಯಾಮೆರಾ ಟ್ರಾಪ್‌ಗಳನ್ನು ಸಹ ಅಳವಡಿಸಲಾಗಿದೆ.
ಅರಣ್ಯ ಮುಂಚೂಣಿ ಸಿಬ್ಬಂದಿಗಳು ಹಗಲು ಮತ್ತು ರಾತ್ರಿಗಸ್ತು ತಿರುಗುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಚಿರತೆ ಸಿಗುವವರೆಗೂ ಸ್ಥಳದ ಸುತ್ತಮುತ್ತ ಸಾರ್ವಜನಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಗಳು ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ರವರೆಗೆ ಒಬ್ಬೊಬ್ಬರಾಗಿ ಸಂಚರಿಸದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದರು.
ಸಾರ್ವಜನಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಗಳು ಅನಿವಾರ್ಯ ಸಂದರ್ಭಗಳಲ್ಲಿ ಗುಂಪಾಗಿ ಓಡಾಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದರು.
ಗಾಮನಗಟ್ಟಿ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಪದಾರ್ಥಗಳನ್ನು ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ಅದನ್ನು ತಿನ್ನಲು ಬರುವ ಬೀದಿ ನಾಯಿಗಳನ್ನು ಹಿಡಿಯಲು ಚಿರತೆ ಬರುವ ಸಂಭವ ಇರುತ್ತದೆ.
ಗಾಮನಗಟ್ಟಿ ಪ್ರದೇಶದ ಸುತ್ತಮುತ್ತಲ ಜನರಿಗೆ ತ್ಯಾಜ್ಯ ವಸ್ತುಗಳನ್ನು ಎಸೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರ ಬರೆಯಲು ವಿಮಾನ ನಿಲ್ಯಾಣ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa