ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ; ಭಾರತ ಗಂಭೀರ ಕಳವಳ
ನವದೆಹಲಿ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಹಾಗೂ ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದ ನಿರಂತರ ಘಟನೆಗಳ ಕುರಿತು ಭಾರತ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನ
MEA


ನವದೆಹಲಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶದಲ್ಲಿ ಹಿಂದೂಗಳು, ಕ್ರಿಶ್ಚಿಯನ್ನರು ಹಾಗೂ ಬೌದ್ಧರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದ ನಿರಂತರ ಘಟನೆಗಳ ಕುರಿತು ಭಾರತ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆಯನ್ನು ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳನ್ನು ಶೀಘ್ರ ನ್ಯಾಯಕ್ಕೆ ತರಲಾಗುತ್ತದೆ ಎಂಬ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ.

ಶುಕ್ರವಾರ ನಡೆದ ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಬಾಂಗ್ಲಾದೇಶಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು. ನೆರೆಯ ದೇಶದಲ್ಲಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಹಾಗೂ ನಿಕಟವಾಗಿ ಗಮನಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳನ್ನು ಕೇವಲ ಮಾಧ್ಯಮಗಳ ಉತ್ಪ್ರೇಕ್ಷೆ ಅಥವಾ ಸಾಮಾನ್ಯ ರಾಜಕೀಯ ಹಿಂಸಾಚಾರವೆಂದು ತಳ್ಳಿಹಾಕಲಾಗುವುದಿಲ್ಲ ಎಂದು ವಕ್ತಾರರು ಹೇಳಿದರು.

ಮಧ್ಯಂತರ ಸರ್ಕಾರದ ಅವಧಿಯಲ್ಲಿ, ಸ್ವತಂತ್ರ ಮೂಲಗಳು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ 2,900ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ನಡೆದಿರುವುದನ್ನು ದಾಖಲಿಸಿವೆ ಎಂದು ಅವರು ಉಲ್ಲೇಖಿಸಿದರು.

ಬಾಂಗ್ಲಾದೇಶದ ಕುರಿತು ಭಾರತದ ನಿಲುವು ಆರಂಭದಿಂದಲೂ ಸ್ಪಷ್ಟ ಮತ್ತು ಸ್ಥಿರವಾಗಿದೆ. ಬಾಂಗ್ಲಾದೇಶದ ಜನರೊಂದಿಗೆ ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಭಾರತ ಬದ್ಧವಾಗಿದೆ. ನಾವು ಅಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತೇವೆ. ಶಾಂತಿಯುತ ವಾತಾವರಣದಲ್ಲಿ ನಡೆಯುವ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಭಾಗವಹಿಸುವ ಚುನಾವಣೆಯನ್ನು ಭಾರತ ಬೆಂಬಲಿಸುತ್ತದೆ ಎಂದು ರಣಧೀರ್ ಜೈಸ್ವಾಲ್ ಹೇಳಿದರು.

17 ವರ್ಷಗಳ ಬಳಿಕ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶಕ್ಕೆ ಮರಳಿರುವ ವಿಚಾರವನ್ನು ಉಲ್ಲೇಖಿಸಿದ ವಕ್ತಾರರು, ಈ ಬೆಳವಣಿಗೆಯನ್ನು ಕೂಡಾ ಮುಕ್ತ ಮತ್ತು ನ್ಯಾಯಯುತ ಚುನಾವಣೆಯ ದೃಷ್ಟಿಕೋನದಲ್ಲಿಯೇ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಬಾಂಗ್ಲಾದೇಶದಲ್ಲಿ ಹರಡಲಾಗುತ್ತಿರುವ ಸುಳ್ಳು ಭಾರತ ವಿರೋಧಿ ನಿರೂಪಣೆಯನ್ನು ಅವರು ತಿರಸ್ಕರಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ನಾಗರಿಕರ ಭದ್ರತೆಯನ್ನು ಖಚಿತಪಡಿಸುವುದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande