


ಕೊಪ್ಪಳ, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪ್ರತಿ ವರ್ಷದಂತೆ ಈ ವರ್ಷವೂ ಸಹ ಡಿಸೆಂಬರ್ 29 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ವಿಶ್ವ ಮಾನವ ದಿನಾಚರಣೆಯ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕನ್ನಡ ನಾಡಿನ ಹಿರಿಮೆಯನ್ನು ತಮ್ಮ ಅದ್ಭುತ ಸಾಹಿತ್ಯ ಮತ್ತು ಕವನಗಳ ಮೂಲಕ ಜಗತ್ತಿಗೆ ಪರಿಚಯಿಸಿದ ಹಾಗೂ ವಿಶ್ವ ಮಾನವ ಸಂದೇಶಗಳನ್ನು ಸಾರಿದ ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಕಾರ್ಯಕ್ರಮವನ್ನು ಡಿ. 29 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪದವಿ ಕಾಲೇಜು ಮಕ್ಕಳು ಪಾಲ್ಗೊಳ್ಳುವಂತಾಗಬೇಕು. ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ವಿಶ್ವ ಮಾನವ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ, ವಿಶೇಷ ಉಪನ್ಯಾಸ, ಕುವೆಂಪು ರವರ ಗೀತೆಗಳ ಗಾಯನ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಅಲ್ಲದೆ ಸಾರ್ವಜನಿಕರು, ಸಾಹಿತಿಗಳು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ಮಂಜುನಾಥ ಗುಂಡೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಕೊಪ್ಪಳದ ಹಿರಿಯ ಲೇಖಕರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜಮದಾರ, ಸಾಹಿತಿಗಳಾದ ಮಹಾಂತೇಶ ಮಲ್ಲನಗೌಡರ ಹಾಗೂ ಪುಷ್ಪಲತಾ ಏಳಬಾವಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್