
ನವದೆಹಲಿ, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅರಾವಳಿ ಪರ್ವತ ಶ್ರೇಣಿ ಸಂರಕ್ಷಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಸೋಮವಾರ ಸ್ವಾಗತಿಸಿದ್ದಾರೆ.
ಅರಾವಳಿ ಶ್ರೇಣಿಯ ರಕ್ಷಣೆ ಮತ್ತು ಪುನಃಸ್ಥಾಪನೆಗೆ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಯಾದವ್, ಪ್ರಸ್ತುತ ಪರಿಸ್ಥಿತಿಯಲ್ಲಿ ಅರಾವಳಿ ಪ್ರದೇಶದಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡುವುದಕ್ಕೂ, ಅಸ್ತಿತ್ವದಲ್ಲಿರುವ ಗುತ್ತಿಗೆಗಳನ್ನು ನವೀಕರಿಸುವುದಕ್ಕೂ ಸಂಪೂರ್ಣ ನಿಷೇಧ ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅರಾವಳಿ ಶ್ರೇಣಿಗೆ ಸಂಬಂಧಿಸಿದಂತೆ ನ್ಯಾಯಾಲಯ ತನ್ನ ಆದೇಶವನ್ನು ತಡೆಹಿಡಿದು, ಸಮಸ್ಯೆಗಳ ಅಧ್ಯಯನಕ್ಕಾಗಿ ಹೊಸ ಸಮಿತಿಯನ್ನು ರಚಿಸುವಂತೆ ಸೂಚಿಸಿರುವುದನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.
ಈ ಪ್ರಕ್ರಿಯೆಯಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲ ಸಹಕಾರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅರಾವಳಿ ಪರ್ವತ ಶ್ರೇಣಿ ಉತ್ತರ ಭಾರತದ ಪರಿಸರ ಸಮತೋಲನಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಅದರ ಸಂರಕ್ಷಣೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳು ಪರಿಸರ ರಕ್ಷಣೆಯ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿವೆ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa