
ಬೆಂಗಳೂರು, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರು ಮಹಾನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಹೊಸ ವರ್ಷಾಚರಣೆಗೆ ಕೈಗೊಳ್ಳಲಾಗಿರುವ ಭದ್ರತಾ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರವಾಗಿ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಂಪೂರ್ಣ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಹೊಸ ವರ್ಷಾಚರಣೆ ಬಳಿಕ ಜನರು ಸುಗಮವಾಗಿ ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳನ್ನು ಸಂಚರಿಸುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಜನದಟ್ಟಣೆ ಕಾರಣದಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಬೇಕು ಎಂದು ಹೇಳಿದರು.
ಭದ್ರತಾ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ 20 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸಲಾಗುತ್ತಿದೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಜೊತೆಗೆ ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು 4 ಕಂಟ್ರೋಲ್ ರೂಂಗಳು, 78 ಕಾವಲು ಗೋಪುರಗಳು, 164 ಮಹಿಳಾ ಸಹಾಯ ಡೆಸ್ಕ್‌ಗಳು ಮತ್ತು 55 ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ, ನಗರದಲ್ಲಿರುವ 50 ಫ್ಲೈಓವರ್‌ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa