
ಬೆಂಗಳೂರು, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ನಿರಂತರವಾಗಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಗುರಿ ಸಾಧಿಸುವವರೆಗೂ ಕಾರ್ಯಾಚರಣೆಗಳನ್ನು ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್ ವೆಹಿಕಲ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಪೌಲ್ ಜಾನ್ ರೆಸಾರ್ಟ್ ಮತ್ತು ಹೋಟೆಲ್ ಸಂಸ್ಥೆಯು ಇಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್ ಕಾರ್ ರ‍್ಯಾಲಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ ದ್ರವ್ಯಗಳು ವಿಶ್ವಕ್ಕೆ ಮಾರಕವಾಗಿದೆ. ಭವಿಷ್ಯದ ಯುವ ಪೀಳಿಗೆಯನ್ನು ನಾಶಪಡಿಸುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಘೋಷಿಸಲಾಗಿದೆ. ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಮರ ಸಾರಿದ್ದೇವೆ. ಪೊಲೀಸರು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡು, ರೂ. 300 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ದೇಶದ ಅಭಿವೃದ್ಧಿ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡಲು ಯುವಜನತೆ ಮಾದಕ ವ್ಯಸನಗಳಿಂದ ದೂರ ಉಳಿಯಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ , ಫೆಡರೇಷನ್ ಆಫ್ ಹಿಸ್ಟೋರಿಕ್ ವೆಹಿಕಲ್ಸ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಾದ ಡಾ.ರವಿಪ್ರಕಾಶ್ ಸೇರಿದಂತೆ ಮುಂತಾದವರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa