
ಗಂಗಾವತಿ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿವಾಹಪೂರ್ವ ಪ್ರೀ - ವೆಡ್ಡಿಂಗ್ ಶೂಟ್ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದ ಭಾವೀ ಯುವ ದಂಪತಿ ಓವರ್‍ಟೇಕ್ ಮಾಡುವಾಗ ಉಂಟಾದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ.
ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳ ಹಾಗೂ ಕಾರಟಗಿ ತಾಲೂಕಿನ ಮುಳ್ಳೂರು ಗ್ರಾಮದ ಕವಿತಾ ಅವರ ವಿವಾಹ ನಿಶ್ಚಿತಾರ್ಥವಾಗಿದ್ದು, ವಿವಾಹಕ್ಕಾಗಿ ಪ್ರೀ-ವೆಡ್ಡಿಂಗ್ ಶೂಟಿಂಗ್ ಮಾಡಿಕೊಳ್ಳಲು ನಿರ್ಧರಿಸಿದ್ದರು. ಭಾನುವಾರ ವಿವಾಹ ಪೂರ್ವದ ಪ್ರೀ - ವೆಡ್ಡಿಂಗ್ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಇಬ್ಬರೂ ರಸ್ತೆಗೆ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುನಿರಾಬಾದ್‍ನ ಪಂಪಾವನ, ಕೂಕನಪಳ್ಳಿಯ ಬೂದೇಶ್ವರ ದೇವಸ್ಥಾನ ಬಳಿ ಪ್ರೀ-ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಬಳಿಕ ಕರಿಯಪ್ಪ, ಕವಿತಾಳನ್ನು ಬೈಕ್ ಮೇಲೆ ಮುಳ್ಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಚಿಕ್ಕಬೆಣಕಲ್ ಗ್ರಾಮದ ಬಳಿ ಲಾರಿಯನ್ನು ಓವರ್ ಟೆಕ್ ಮಾಡುವಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್