ಯಾದಗಿರಿ, 14 ಜೂನ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ ಕ್ಷೇತ್ರ ಅಭಿವೃದ್ಧಿಗೆ 857 ಕೋಟಿಯಷ್ಟು ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇಂಥಹ ಐತಿಹಾಸಿಕ ನಿರ್ಣಯ ಬಿಜೆಪಿಯವರ ಕಲ್ಪನೆಯಲ್ಲೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
24 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೇರಿಸುವುದು, ಹೊಸದಾಗಿ 7 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 4 ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಅಲ್ಲದೇ 30 ಹಾಸಿಗೆಯ 25 ಸಮುದಾಯ ಆರೋಗ್ಯ ಕೇಂದ್ರಗಳನ್ನು 50 ಹಾಸಿಗೆಗೆ ಏರಿಕೆ ಸೇರಿದಂತೆ 6 ಸಮುದಾಯ ಆರೋಗ್ಯ ಕೇಂದ್ರಗಳನ್ನ 100 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುವುದು. 9 ತಾಲೂಕು ಆಸ್ಪತ್ರೆಗಳನ್ನ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುತ್ತದೆ. 2 ತಾಲೂಕು ಆಸ್ಪತ್ರೆಗಳನ್ನು 200 ಬೆಡ್ ಆಸ್ಪತ್ರೆಗಳನ್ನಾಗಿ ನಿರ್ಮಿಸುವುದರ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa