ಬಳ್ಳಾರಿ, 11 ಜುಲೈ (ಹಿ.ಸ.) :
ಆ್ಯಂಕರ್ : ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳು ಕಲಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಕರೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ರೀಕೃ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ “ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆಯನ್ನು ಆಸ್ವಾದಿಸುವ ಮನಸ್ಥಿತಿ ಬಹಳ ಮುಖ್ಯ. ವಿದ್ಯಾರ್ಥಿಗಳು ಕೇವಲ ವಿದ್ಯಾಭ್ಯಾಸಕ್ಕೆ ಸೀಮಿತವಾಗಿರಬಾರದು. ತಮ್ಮಲ್ಲಿನ ಕಲಾ ಪ್ರತಿಭೆಗಳನ್ನು ಹೊರಹಾಕಬೇಕು. ಸಾಂಸ್ಕೃತಿಕವಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಶಿಕ್ಷಣ ಎಂದರೆ ಕೇವಲ ವಿದ್ಯಾಭಾಸವಲ್ಲ, ಬದಲಾಗಿ ವಿದ್ಯಾರ್ಥಿಗಳು ಕಲೆ, ಕವನ, ಕವಿತೆ, ಸಾಹಿತ್ಯ ಬರವಣಿಗೆ, ವಿದ್ಯೆ-ವಿನಯ ಅಳವಡಿಸಿಕೊಂಡರೆ ದೇಶದ ಸಂಸ್ಕೃತಿ ಸಮೃದ್ಧಿಗೆ ಬೆಳಕಾಗುತ್ತದೆ ಎಂದರು.
ಯುವಕರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಯುವಕರಲ್ಲಿನ ಕಲೆಯನ್ನು ಪ್ರೋತ್ಸಾಹಿಸುವುದಕ್ಕಾಗಿಯೇ ‘ಯುವ ಸೌರಭ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವೇದಿಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ವಿವಿಯ ಕುಲಪತಿಯವರೊಂದಿಗೆ ಚರ್ಚಿಸಲಾಗಿದೆ ಎಂದರು.
ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಒತ್ತಡ ಜೀವನದಲ್ಲಿ ಕಲೆಯು ನೆಮ್ಮದಿಯ ಪಾಠ ಕಲಿಸುತ್ತದೆ. ಕಲಾಭ್ಯಾಸಕ್ಕೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ನಾಟಕ ವಿಭಾಗವಿದ್ದು, ವಿದ್ಯಾರ್ಥಿಗಳಿಗೆ ಕಲಾ ಶಿಕ್ಷಣ ಬೋಧನೆ ಮಾಡುವ ಕೆಲಸವಾಗುತ್ತಿದೆ ಎಂದರು.
ವಿವಿಯಲ್ಲಿ ಸುಸಜ್ಜಿತ ಆಡಿಟೋರಿಯಂ ಹಾಲ್ ನಿರ್ಮಾಣ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು. ಗುಣಮಟ್ಟದ ಕಟ್ಟಡ ನಿರ್ಮಾಣಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು:
ಬಳಿಕ ಕಾರ್ಯಕ್ರಮದಲ್ಲಿ ಕಂಪ್ಲಿ ಎಮ್ಮಿಗನೂರಿನ ಜ್ಞಾನೇಶ್ವರ ತಂಡದಿದ ಸುಗಮ ಸಂಗೀತ, ಬಳ್ಳಾರಿಯ ನಟರಾಜ ಕುಚುಪುಡಿ ನೃತ್ಯ-ಸಂಗೀತ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ಸಂಡೂರು ತಾಲ್ಲೂಕಿನ ವಿ.ನಾಗಲಾಪುರದ ಶರಣಬಸವ.ಹೆಚ್ ಅವರ ಜಾನಪದ ಗೀತೆ, ಸಿರಿಗೇರಿಯ ಎನ್.ಮಣಿಕಂಠ ಸಂಗಡಿಗರಿ0ದ ಬಯಲಾಟ(ಭಾರ್ಗವ ರಾಮ), ಬಳ್ಳಾರಿಯ ಎಂ.ಎಸ್.ಹರ್ಷ ತಂಡದಿAದ ತಾಷರಂಡೋಲ್, ಸಂಡೂರು ತಾಲ್ಲೂಕಿನ ಎಂ.ಬಸಾಪುರದ ಆರ್.ನಾಗರಾಜ ತಂಡದಿ0ದ ಡೊಳ್ಳು ಕುಣಿತ ಸೇರಿದಂತೆ ಇತರೆ ವೈವಿಧಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಕರ್ನಾಟಕ ಬಂಜಾರ ಸಂಸ್ಕೃತಿ ಅಕಾಡೆಮಿಯ ಸದಸ್ಯ ಪ್ರೊ.ಶಾಂತನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಯ ವಿಭಾಗಗಳ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್