ಶಿವಮೊಗ್ಗ, 14 ಜುಲೈ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿತವಾಗಿರುವ ಸಿಗಂದೂರು ಕೇಬಲ್ ಸೇತುವೆ, ದೇಶದ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಂದ ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಈ ಸೇತುವೆಯು ಸಮೃದ್ಧ ಭವಿಷ್ಯದತ್ತ ಸಾಗುವ ನೂತನ ಬಾಗಿಲುಗಳನ್ನು ತೆರೆಯುತ್ತಿದೆ.
ಈ ಸೇತುವೆಯು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲ ಹಾಗೂ ಪ್ರತ್ಯೇಕ ಫುಟ್ ಪಾತ್‍ಗಳೊಂದಿಗೆ ನಿರ್ಮಾಣವಾಗಿದೆ. 473 ಕೋಟಿ ರೂ. ವೆಚ್ಚದಲ್ಲಿ ದಿಲೀಪ್ ಬಿಲ್ಡ್‌ಕಾನ್ ಸಂಸ್ಥೆ ನಿರ್ಮಾಣವನ್ನು ನಿರ್ವಹಿಸಿದೆ. ಸೇತುವೆಯ ಉಕ್ಕಿನ ಕೇಬಲ್ 470 ಮೀ. ಉದ್ದವಿದ್ದು, ಗರಿಷ್ಠ 100 ಟನ್ ತೂಕ ಭರಿಸುವ ಸಾಮರ್ಥ್ಯ ಹೊಂದಿದೆ. ಕೋವಿಡ್ ವಿಳಂಬದ ನಡುವೆಯೂ ಐದು ವರ್ಷದಲ್ಲಿ ಪೂರ್ಣಗೊಂಡ ಈ ಯೋಜನೆ ಸಾರ್ವಜನಿಕರ ಸಂಚಾರ ಸುಗಮಗೊಳಿಸುವುದರೊಂದಿಗೆ ಪ್ರವಾಸೋದ್ಯಮಕ್ಕೂ ಪೂರಕವಾಗಲಿದೆ.
ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ಎಂದು ನಾಮಕರಣ ಮಾಡಲಾಗಿದೆ ಎಂದು ಘೋಷಿಸಿದರು. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನೂತನ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪೂರ್ಣ ಆಗಲಿದೆ ಎಂದು ತಿಳಿಸಿದರು.
5000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಗುರಿ ಹೊಂದಿದ್ದೇವೆ. 1300 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹಾಸನದಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ನಾಲ್ಕು ಲೈನ್ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಪ್ರಯಾಣದ ಸಮಯ ಅರ್ಧದಷ್ಟು ಕಡಿಮೆಯಾಗಲಿದೆ. ಬೆಂಗಳೂರು-ಚೆನೈ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ದೇಶದ ಅತಿ ಉದ್ದದ 2ನೇ ಕೇಬಲ್ ಸೇತುವೆ ಉದ್ಘಾಟನೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರಿಗೆ, ಸ್ಥಳೀಯ ಶಾಸಕರಿಗೆ ಆಮಂತ್ರಣ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳ ನಡೆಗೆ ಬಿಜೆಪಿ ತೀವ್ರ ಆಕ್ರೋಶ
ಮುಖ್ಯಮಂತ್ರಿಗೆ ಹೊಟ್ಟೆ ಉರಿ : ಅಶೋಕ
ಮುಖ್ಯಮಂತ್ರಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ತಾನು ಕೊಡ, ಪರರನ್ನು ಕೊಡಲು ಬಿಡ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶರಾವತಿ ಹಿನ್ನೀರು ಭಾಗದ ಜನರ 60 ವರ್ಷಗಳ ಕನಸು ಈಡೇರುತ್ತಿರುವ ಇವತ್ತಿನ ಸಂತೋಷದ ದಿನವನ್ನ ಅಲ್ಲಿನ ಜನಸಾಮಾನ್ಯರು ತಮ್ಮ ಮನೆಯ ಹಬ್ಬದಂತೆ ತೋರಣ ಕಟ್ಟಿ, ಹೂವುಗಳಿಂದ ಅಲಂಕಾರ ಮಾಡಿ ಸಂಭ್ರಮ ಪಡುತ್ತಿದ್ದಾರೆ.
ಆದರೆ ಒಲ್ಲದ ಗಂಡ ಮೊಸರಲ್ಲಿ ಕಲ್ಲು ಹುಡುಕಿದ ಎನ್ನುವಂತೆ ನಾಡಿನ ಮುಖ್ಯಮಂತ್ರಿಗಳಾಗಿ ಇಂತಹ ಐತಿಹಾಸಿಕ ಸುದಿನದಂದು ಅಲ್ಲಿನ ಜನರ ಸಂಭ್ರಮದಲ್ಲಿ ಪಾಲ್ಗೊಳ್ಳುವ ಬದಲು ಇಲ್ಲಸಲ್ಲದ ಕ್ಯಾತೆ ತೆಗೆದಿದ್ದೀರಲ್ಲ ಸ್ವಾಮಿ, ನಿಮ್ಮ ಭಂಡತನಕ್ಕೆ ಏನು ಹೇಳೋಣ.
60 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಸಾಧ್ಯವಾಗದ್ದನ್ನು ಪ್ರಧಾನಿ ನರೇಂದ್ರ ಮೋದಿಯವರ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಾಡಿ ತೋರಿಸಿತು ಎನ್ನುವ ಹೊಟ್ಟೆ ಉರಿನಾ? ಅಥವಾ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ರಾಹುಲ್ ಗಾಂಧಿ ಅವರು ಆದೇಶ ಮಾಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಹೈಕಮಾಂಡ್ ನಾಯಕರು ಕರೆದರೆ ಕುರ್ಚಿ ಉಳಿಸಿಕೊಳ್ಳಲು ಎಲ್ಲಾ ಕೆಲಸ ಬಿಟ್ಟು ವಿಶೇಷ ವಿಮಾನದಲ್ಲಿ ದೆಹಲಿಗೆ ಓಡಿ ಹೋಗುತ್ತೀರಿ, ಸಿಗಂದೂರು ಸೇತುವೆ ಉದ್ಘಾಟನೆಗೆ ಹೋಗಲು ಮನಸ್ಸಿಲ್ಲವಾ?
ನಿಮ್ಮಂತಹವರನ್ನು ಮುಖ್ಯಮಂತ್ರಿಗಳಾಗಿ ಪಡೆದ ಕನ್ನಡಿಗರು ನಿಜಕ್ಕೂ ನತದೃಷ್ಟರು ಎಂದು ಅಶೋಕ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ ದಾಳಕ್ಕೆ ಬಳಕೆ; ಪ್ರಹ್ಲಾದ ಜೋಶಿ ಆರೋಪ
ಶರಾವತಿ ನದಿಯ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂದೂರು ಸೇತುವೆಯ ಲೋಕಾರ್ಪಣೆಯನ್ನು ಶಿವಮೊಗ್ಗದ ಜನ ನಿಜಕ್ಕೂ ಹಬ್ಬದ ಸಂದರ್ಭ ಎಂದೇ ಭಾವಿಸುತ್ತಿದ್ದಾರೆ.
ಆದರೆ ಈ ಸಂದರ್ಭವನ್ನು ರಾಜಕೀಯ ದಾಳವಾಗಿ ಉರುಳಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಾಗಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಈ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು,
ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಬಿವೈ ರಾಘವೇಂದ್ರ ಜುಲೈ 9 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನದ ಜೊತೆ ಪತ್ರವನ್ನು ಬರೆದಿದ್ದಾರೆ.
ಅಲ್ಲದೆ, ಸಿಗಂದೂರು ಸೇತುವೆ ಕರ್ನಾಟಕದ ಹೆಮ್ಮೆ, ಜನರಿಗೆ ಅನುಕೂಲ ಹಾಗೂ ಪ್ರವಾಸಿ ಕ್ಷೇತ್ರವಾಗುವ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜುಲೈ 11 ರಂದು ಪತ್ರ ಬರೆದು ಆಹ್ವಾನಿಸಿದ್ದಾರೆ.
ರಾಜ್ಯದ ಅಭಿವೃದ್ಧಿಯನ್ನು ಮರೆತ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ, ಇದೀಗ ಮುಖ್ಯಮಂತ್ರಿ ಖುರ್ಚಿ ಜಗಳದಲ್ಲಿ ಮುಳುಗಿದೆ. ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾದ ಸೇತುವೆಯನ್ನು ಸಂಭ್ರಮಿಸುವ ಬದಲು ತನ್ನ ಕುರ್ಚಿ ಉಳಿಸಿಕೊಳ್ಳುವ ಬರದಲ್ಲಿ, ಶಿಷ್ಟಾಚಾರ ನಿಯಮ ಉಲ್ಲಂಘನೆ, ನನ್ನನ್ನು ಆಹ್ವಾನಿಸಿಯೇ ಇಲ್ಲ ಎಂಬ ಸುಳ್ಳು ಹಾಗೂ ಕೆಟ್ಟ ರಾಜಕಾರಣವನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮಾಡುತ್ತಿರುವುದು ರಾಜ್ಯಕ್ಕೆ ಮಾಡುತ್ತಿರುವ ದ್ರೋಹ.
ಕರ್ನಾಟಕದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರ ಜೊತೆ ಈ ಹಿಂದೆಯೇ ಸಂಸದರಾದ ಬಿವೈ ರಾಘವೇಂದ್ರರ ಹಾಗೂ ಅಧಿಕಾರಿಗಳು ಚರ್ಚಿಸಿ, ಉದ್ಘಾಟನೆಯ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೆ, ಉದ್ಘಾಟನೆಯ ಕುರಿತು ಮುಖ್ಯಮಂತ್ರಿಗಳಿಗೂ ಮಾಹಿತಿ ರವಾನೆಯಾಗಿದೆ. ಕುರ್ಚಿ ಗಲಾಟೆಯನ್ನು ಮರೆಮಾಚಲು ಈ ರೀತಿಯ ರಾಜಕಾರಣದ ದಾಳ ಉರುಳಿಸಿರುವುದು, ರಾಜ್ಯದ ದುರಂತ ಎಂದು ಜೋಶಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa