ರಾಯಚೂರು, 14 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಸಾಧನೆ ಹಿನ್ನೆಲೆಯಲ್ಲಿ ಜುಲೈ 14ರಂದು ರಾಯಚೂರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‍ಗಳಿಗೆ ಪೂಜಾ ಹಾಗೂ ಪ್ರಯಾಣಿಕರಿಗೆ ಸಿಹಿ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರಿಗೆ ಬಸ್ಸುಗಳಿಗೆ ಬಣ್ಣಬಣ್ಣದ ರಿಬ್ಬನ್, ತೆಂಗಿನ ಗರಿಗಳನ್ನು ಕಟ್ಟಿ, ಹೂವಿನ ಹಾರಗಳು ಮತ್ತು ಬಲೂನಗಳನ್ನು ಹಾಕಿ ಸಿಂಗರಿಸಲಾಗಿತ್ತು. ಜುಲೈ 14ರಂದು ರಾಜ್ಯಾದ್ಯಂತ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಏಕಕಾಲಕ್ಕೆ ನಡೆದಂತೆ ರಾಯಚೂರ ಕೇಂದ್ರ ಬಸ್ ನಿಲ್ದಾಣದಲ್ಲಿ ಸಹ ಸಾರ್ವಜನಿಕರಿಗೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಸಮಿತಿಯ ಉಪಾಧ್ಯಕ್ಷರಾದ ಹನುಮಂತಪ್ಪ ಜಾಲಿಬೆಂಚಿ, ನಾಗೇಂದ್ರ ಮಠಮಾರಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಸಾಜೀದ್ ಸಮೀರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯಲೆಕ್ಕಾಧಿಕಾರಿ ವಿಜಯಶಂಕರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಮಾತನಾಡಿ, ರಾಜ್ಯ ಸರ್ಕಾರವು ಹಿಂದುಳಿದ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿ ಮಾಡಿ ಅನುಷ್ಠಾನ ಮಾಡುತ್ತಿದೆ. ವಿಶೇಷವಾಗಿ ಕೌಟುಂಬಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ರಾಜ್ಯ ಸರ್ಕಾರವು ಶಕ್ತಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ರಾಯಚೂರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಇದುವರೆಗೆ 12,669 ಕೋಟಿ ರೂ. ವಿನಿಯೋಗಿಸಿರುವುದು ದಾಖಲಾರ್ಹ ಸಾಧನೆಯಾಗಿದೆ ಎಂದು ಅವರು ತಿಳಿಸಿದರು.
ರಾಯಚೂರ ಜಿಲ್ಲೆಯಲ್ಲಿ ಇದುವರೆಗೆ ದಾಖಲೆಯ ಪ್ರಮಾಣದಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಸರಾಸರಿ ಪ್ರತಿ ನಿತ್ಯ 1.16 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ ಸಾರಿಗೆ ಆದಾಯ 353.23 ಕೋಟಿ ರೂ. ಆಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ, ವಾಹನ ಚಾಲಕರು, ನಿರ್ವಾಹಕರು, ಸಾರ್ವಜನಿಕರು ಇದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್